ನಾಮಪತ್ರ ಸಲ್ಲಿಕೆ ಬಿರುಸು

ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ನಾಮಪತ್ರ ಸಲ್ಲಿಸಿದರು. ಸಿ.ಸಿ. ಪಾಟೀಲ್ ಮತ್ತಿತರರು ಇದ್ದಾರೆ.

ಬೆಂಗಳೂರು,ಏ.೧೫: ಮೇ ೧೦ ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಬಿರುಸಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಇಂದು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.
ರಾಜ್ಯ ವಿಧಾನಸಭೆಯ ೨೨೪ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಕಾರ್ಯ ಏ. ೧೩ ರಿಂದ ಆರಂಭವಾಗಿದ್ದು, ಮೊದಲ ದಿನವೇ ೨೨೧ ನಾಮಪತ್ರಗಳು ಸಲ್ಲಿಕೆಯಾಗಿದ್ದವು. ನಿನ್ನೆ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ರವರ ಜಯಂತಿಯ ಸಾರ್ವತ್ರಿಕ ರಜೆ ಇದ್ದ ಕಾರಣ ನಾಮಪತ್ರ ಸಲ್ಲಿಕೆಗೆ ಅವಕಾಶವಿರಲಿಲ್ಲ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಸಚಿವರು, ಶಾಸಕರು, ಮಾಜಿ ಶಾಸಕರುಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಿದರು.
ಹಾವೇರಿ ಜಿಲ್ಲೆಯ ಶಿಗ್ಗಾಂವ್ ಕ್ಷೇತ್ರದಿಂದ ಕಣಕ್ಕಿಳಿದಿರುವ ಮುಖ್ಯಮಂತ್ರಿಗಳು ಇಂದು ಬೆಳಿಗ್ಗೆಯೇ ಶಿಗ್ಗಾಂವ್‌ನ ಚುನಾವಣಾಧಿಕಾರಿಗೆ ತಮ್ಮ ನಾಮಪತ್ರ ನೀಡಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಪಟ್ಟಣದ ದ್ಯಾಮ್ಮವ್ವ ಗುಡಿಗೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಪಟ್ಟಣದಲ್ಲಿರುವ ಡಾ. ಬಿ.ಆರ್. ಅಮಬೇಡ್ಕರ್ ಹಾಗೂ ಕಿತ್ತೂರು ರಾಣಿ ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದು, ಏ. ೧೯ಕ್ಕೆ ಪಕ್ಷದ ಕಾರ್ಯಕರ್ತರು, ಬೆಂಬಲಿಗರೊಂದಿಗೆ ಅದ್ಧೂರಿಯಾಗಿ ನಾಮಪತ್ರ ಸಲ್ಲಿಸುವರು.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಇಂದು ಬೆಳಿಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಗೆ ತೆರಳಿ ಅಲ್ಲಿ ಹುಬ್ಬಳಿಯ ಸಿದ್ಧಾರೂಢ ಮಠಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಅಲ್ಲಿಂದ ರಸ್ತೆ ಮೂಲಕ ಶಿಗ್ಗಾಂವಿನ ತಹಶೀಲ್ದಾರ್ ಕಚೇರಿಗೆ ಆಗಮಿಸಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಚಿವ ಸಿ.ಸಿ ಪಾಟೀಲ್, ಸಂಸದ ಶಿವಕುಮಾರ್ ಉದಾಸಿ ಮುಖ್ಯಮಂತ್ರಿಗಳ ಜತೆ ಇದ್ದರು.
ಗೋವಿಂದ ಕಾರಜೋಳ ನಾಮಪತ್ರ
ಬಾಗಲಕೋಟೆ ಜಿಲ್ಲೆಯ ಮುಧೋಳ ವಿಧಾನಸಭಾ ಕ್ಷೇತ್ರದಿಂದ ಸಚಿವ ಗೋವಿಂದಕಾರಜೋಳ ಅವರು ಇಂದು ತಮ್ಮ ನಾಮಪತ್ರ ಸಲ್ಲಿಸಿದರು.

ಪೂರ್ಣಗೊಳ್ಳದ ಕಾಂಗ್ರೆಸ್-ಬಿಜೆಪಿ ಪಟ್ಟಿ
ಈ ಚುನಾವಣೆಗೆ ಕಾಂಗ್ರೆಸ್-ಬಿಜೆಪಿ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಯನ್ನು ಇನ್ನೂ ಪೂರ್ಣಪ್ರಮಾಣದಲ್ಲಿ ಪ್ರಕಟಿಸಿಲ್ಲ. ಬಿಜೆಪಿ ೨೧೨ ಕ್ಷೇತ್ರಗಳಿಗೆ, ಕಾಂಗ್ರೆಸ್ ೧೬೬ ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಖೈರುಗೊಳಿಸುವ ಕಸರತ್ತನ್ನು ಎರಡೂ ಪಕ್ಷಗಳು ನಡೆಸಿವೆ.
ಜೆಡಿಎಸ್ ನಿನ್ನೆ ತನ್ನ ೨ನೇ ಪಟ್ಟಿಯನ್ನು ಪ್ರಕಟಿಸಿದ್ದು, ಇದುವರೆಗೂ ಜೆಡಿಎಸ್ ೧೪೩ ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಪ್ರಕಟಿಸಿದೆ.
ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಕಳೆದ ವಾರವೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಬಾಕಿ ಇರುವ ೫೮ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯನ್ನು ಆಖೈರುಗೊಳಿಸಿದೆ. ಈ ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಭಾರಿ ಪೈಪೋಟಿ ಇರುವುದರಿಂದ ಟಿಕೆಟ್ ಕೈ ತಪ್ಪುವವರು ಬಂಡಾಯದ ಬಾವುಟ ಹಾರಿಸುವ ಭೀತಿಯಿಂದ ಪಟ್ಟಿ ಬಿಡುಗಡೆಯನ್ನು ವಿಳಂಬಮಾಡಿದೆ. ಇಂದು ಇಲ್ಲವೆ ನಾಳೆ ಕಾಂಗ್ರೆಸ್ ಅಭ್ಯರ್ಥಿಗಳ ೩ನೇ ಪಟ್ಟಿ ಬಿಡುಗಡೆಯಾಗಲಿದೆ.
ಬಿಜೆಪಿ ಸಹ ೧೨ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಟಿಕೆಟ್‌ಗಾಗಿ ಪಟ್ಟು ಹಿಡಿದಿರುವುದು ಬಿಜೆಪಿ ಪಟ್ಟಿ ಬಿಡುಗಡೆ ತಡವಾಗಲು ಕಾರಣವಾಗಿದೆ. ಇಂದು ರಾತ್ರಿಯೊಳಗೆ ಬಹುತೇಕ ಬಿಜೆಪಿ ಪಟ್ಟಿ ಬಿಡುಗಡೆಯಾಗಲಿದೆ.

ಗೆಲುವಿನ ವಿಶ್ವಾಸ
ಈ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಹೆಚ್ಚಿನ ಬಹುಮತದಿಂದ ಗೆಲ್ಲುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶಿಗ್ಗಾಂವ್‌ನಲ್ಲಿಂದು ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿಯ ಮೇಲೆ ಮತ ಕೇಳುತ್ತಿದ್ದೇನೆ. ಕಳೆದ ಬಾರಿಗಿಂತ ಈ ಬಾರಿ ತಾಲ್ಲೂಕಿನಲ್ಲಿ ಹೆಚ್ಚು ಅಭಿವೃದ್ಧಿ ಕೆಲಸಗಳಾಗಿವೆ. ಜನತೆ ಆರ್ಶೀವಾದ ಮಾಡುತ್ತಾರೆ ಎಂದರು.
ತಾಲ್ಲೂಕಿನಲ್ಲಿ ಹೊಸ ಕೈಗಾರಿಕೆ, ಐಟಿಐ, ಜಿಟಿಟಿ, ಆರ್ಯುವೇದ ಕಾಲೇಜು, ತಾಯಿ-ಮಕ್ಕಳ ಆಸ್ಪತ್ರೆ ಹೀಗೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಮತದಾರರು ನನ್ನ ಕೈಬಿಡಲ್ಲ ಎಂದರು.
ನಾನು ಎಂದೂ ಶಿಗ್ಗಾಂವ್ – ಸವಣೂರು ಜನರ ಋಣ ತೀರಿಸಲು ಸಾಧ್ಯವಿಲ್ಲ. ನಾನು ಜನರ ನಂಬಿಕೆಗೆ ಚ್ಯುತಿ ಬರದ ಹಾಗೆ ನಡೆದುಕೊಂಡಿದ್ದೇನೆ ಎಂದರು.