
ಉಡುಪಿ, ಎ.೧೪- ಉಡುಪಿ ಜಿಲ್ಲೆಯಲ್ಲಿ ಪಕ್ಷದ ಟಿಕೆಟ್ ಉಳಿಸಿಕೊಂಡ ಏಕೈಕ ಶಾಸಕ ಹಾಗೂ ಸಚಿವ ವಿ.ಸುನೀಲ್ ಕುಮಾರ್ ಅವರು ಮೇ ೧೦ರಂದು ನಡೆಯುವ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆಯ ಮೊದಲ ದಿನವೇ ಕಾರ್ಕಳದಲ್ಲಿ ತಮ್ಮ ನಾಮಪತ್ರ ಸಲ್ಲಿಸಿದರು.
ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಕೂರ್ಮಾರಾವ್ ಅವರು ಇಂದು ಅಧಿಸೂಚನೆಯನ್ನು ಹೊರಡಿಸಿದ್ದು, ಇಂದಿನಿಂದ ಪ್ರಾರಂಭಗೊಂಡ ನಾಮಪತ್ರ ಸಲ್ಲಿಕೆಯ ಮೊದಲ ದಿನ ಜಿಲ್ಲೆಯಲ್ಲಿ ಒಟ್ಟು ೪ ನಾಮಪತ್ರಗಳು ಸಲ್ಲಿಕೆಯಾಗಿವೆ. ೧೧೯ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕಿರಣ್ ಕುಮಾರ್ ಕೊಡ್ಗಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಭ್ಯರ್ಥಿಯಾಗಿ ಮೊಳಹಳ್ಳಿ ದಿನೇಶ್ ಹೆಗ್ಡೆ ನಾಮಪತ್ರ ಸಲ್ಲಿಸಿದರು.
೧೨೦ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಮದಾಸ ಭಟ್ ನಾಮಪತ್ರ ಸಲ್ಲಿಸಿದರೆ, ೧೨೨ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ವಿ.ಸುನೀಲ್ ಕುಮಾರ್ ಚುನಾವಣಾಧಿಕಾರಿ ಮದನಮೋಹನ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಮಣಿರಾಜ್ ಶೆಟ್ಟಿ ಸೂಚಕರಾಗಿದ್ದಾರೆ. ಕಾಪು ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಯಾವುದೇ ನಾಮಪತ್ರಗಳು ಸಲ್ಲಿಕೆಯಾಗಿಲ್ಲ. ನಾಮಪತ್ರ ಸಲ್ಲಿಸಲು ಎಪ್ರಿಲ್ ೨೦ ಕೊನೆಯ ದಿನವಾಗಿದ್ದು, ಎಪ್ರಿಲ್ ೨೧ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಎಪ್ರಿಲ್ ೨೪ ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನವಾಗಿದೆ.