ನಾಳೆಯಿಂದ ಬಳ್ಳಾರಿ, ಹೊಸಪೇಟೆ ನಗರಗಳಲ್ಲಿ ರಾತ್ರಿ ಕರ್ಪ್ಯೂ

ಬಳ್ಳಾರಿ, ಏ.18: ಬಳ್ಳಾರಿ ಮಹಾನಗರ ಪಾಲಿಕೆ ಹಾಗೂ ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಏ.19ರಿಂದ ಏ.30ರವರೆಗೆ
“ಕೊರೊನಾ ರಾತ್ರಿ ಕರ್ಫ್ಯೂ” ಅನ್ನು ಜಾರಿಗೊಳಿಸಿ ಜಿಲ್ಲಾ ವಿಪತ್ತು‌ ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು
ಆದೇಶ ಹೊರಡಿಸಿದ್ದಾರೆ.

ನಾಳೆಯಿಂದ ಏ.30ರವರೆಗೆ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಕೊರೊನಾ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಈ “ಕೊರೊನಾ ಕರ್ಫ್ಯೂ” ಸಂದರ್ಭದಲ್ಲಿ ಅತ್ಯವಶ್ಯಕ ಸೇವೆಗಳಿಗೆ ಮಾತ್ರ ಅನುಮತಿಸಿದ್ದು ಉಳಿದಂತೆ ಎಲ್ಲಾ ಸೇವೆಗಳನ್ನು / ಸಂಚಾರಗಳನ್ನು ನಿಷೇಧಿಸಿಲಾಗಿದೆ ಎಂದು ಜಿಲ್ಲಾಧಿಕಾರಿ ಮಾಲಪಾಟಿ ಅವರು ತಿಳಿಸಿದ್ದಾರೆ.

ವಿವಿಧ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆ ಅನುಮತಿಸಿದೆ.ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವಂತಹ ಎಲ್ಲಾ ಕಾರ್ಖಾನೆಗಳು/ ಕಂಪನಿಗಳು/ ಸಂಸ್ಥೆಗಳು ಯಥಾರೀತಿ ಕಾರ್ಯ ನಿರ್ವಹಿಸಲು ಅನುಮತಿಸಿದೆ. ಆದರೆ ಸಂಬಂಧಿಸಿದ ಕಾರ್ಮಿಕರು/ ನೌಕರರು, “ಕೊರೊನಾ ಕರ್ಫ್ಯೂ” ಅವಧಿಗೆ ಮುನ್ನವೇ ಕರ್ತವ್ಯಕ್ಕೆ ಹಾಜರಿರತಕ್ಕದ್ದು.ವೈದ್ಯಕೀಯ ಸೇವೆಗಳನ್ನು ಮತ್ತು ತುರ್ತು ಚಟುವಟೆಕೆಗೆ ಮಾತ್ರ ಅನುಮತಿಸಿದ್ದು, ಇನ್ನುಳಿದಂತೆ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಿದೆ.

ಅತ್ಯವಶ್ಯಕ ಸೇವೆಗಳನ್ನು ಒದಗಿಸುವಂತಹ ವಾಹನಗಳು/ಸರಕು ಸಾಗಾಣೀಕೆ ವಾಹನಗಳು, ಖಾಲಿ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗಿದೆ.ರಾತ್ರಿ ವೇಳೆಯಲ್ಲಿನ ಬಸ್ಸು, ರೈಲು, ವಿಮಾನದ ದೂರ ಪ್ರಯಾಣಕ್ಕೆ ಅನುಮತಿಸಲಾಗಿದೆ. ಪ್ರಯಾಣಿಕರು ಮನೆಯಿಂದ ನಿಲ್ದಾಣಗಳಿಗೆ ಮತ್ತು ನಿಲ್ದಾಣದಿಂದ ಮನೆಗೆ ಅಧಿಕೃತ ಟಿಕೆಟ್‌ಗಳ ಆಧಾರದ ಮೇಲೆ ಆಟೋ/ ಕ್ಯಾಬ್ ಇತ್ಯಾಧಿಗಳ ಮೂಲಕ ಸಂಚರಿಸಲು ಅನುಮತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಆದೇಶ ಪಾಲನೆಯಲ್ಲಿ ಲೋಪವೆಸಗುವಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.