ನಾಳೆ ಉನ್ನತಮಟ್ಟದ ಸಭೆ

ಹುಬ್ಬಳ್ಳಿ, ಸೆ ೨೮: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಷಯದ ಕುರಿತಂತೆ ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಉನ್ನತಮಟ್ಟದ ಸಭೆ ಕರೆದಿದ್ದು, ಸಭೆಯಲ್ಲಿ ಮುಂದಿನ ಕ್ರಮದ ನಿರ್ಧಾರ ಕೈಗೊಳ್ಳಲಾಗುವುದು ಎಂದು ರಾಜ್ಯ ಕಾನೂನು ಹಾಗೂ ಪ್ರವಾಸೋದ್ಯಮ ಖಾತೆ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತಂತೆ ಈಗಾಗಲೇ ಸುಪ್ರೀಂ ಕೋರ್ಟ್, ಹೈಕೋರ್ಟ್ ಕಾನೂನು ತಜ್ಞರು ಹಾಗೂ ಅನುಭವಿಗಳಿಂದ ಮಾಹಿತಿ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.
ಒಂದುಕಡೆ ಬರ, ಇನ್ನೊಂದು ಕಡೆ ಬೆಂಗಳೂರಿಗೆ ಕುಡಿಯಲು ನೀರಿಲ್ಲ. ಅಣೆಕಟ್ಟಿನಲ್ಲಿ ನೀರಿಲ್ಲದಿರುವುದು ಎಲ್ಲರಿಗೂ ಕಾಣುತ್ತಿದೆ. ಒಟ್ಟಿನಲ್ಲಿ ರಾಜ್ಯ ಸಂಕಷ್ಟಕ್ಕೆ ಸಿಲುಕಿದೆ ಎಂದ ಅವರು, ಇದರ ಪರಿಹಾರಕ್ಕಾಗಿ ಸಂಕಷ್ಟ ಸೂತ್ರ ಕಂಡುಹಿಡಿಯುವುದು ಅಗತ್ಯವಾಗಿದೆ ಎಂದು ಹೇಳಿದರು.
ಈ ವಿಷಯದಲ್ಲಿ ಬಿಜೆಪಿಯವರು ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದ ಅವರು, ಪ್ರಧಾನಿ ಮುಂದೆ ಬಂದು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯಬೇಕು ಎಂದು ಆಗ್ರಹಿಸಿದರು.