ನಾಳೆ ಗೃಹಲಕ್ಷ್ಮಿಯೋಜನೆ ಚಾಲನೆ ಕಾರ್ಯಕ್ರಮ: ಯಶಸ್ವಿಗೊಳಿಸಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಆ.29:- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳಾ ಫಲಾನುಭವಿಗಳಿಗೆ ತಿಂಗಳಿಗೆ 2 ಸಾವಿರ ರೂ. ಜಮೆ ಮಾಡುವ ರಾಜ್ಯ ಮಟ್ಟದ ಚಾಲನೆ ಕಾರ್ಯಕ್ರಮ ಮೈಸೂರಿನಲ್ಲಿ ಆಗಸ್ಟ್ 30ರಂದು ನಡೆಯಲಿದ್ದು, ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಮರಾಜನಗರ ಜಿಲ್ಲೆಯ ಫಲಾನುಭವಿಗಳು ಆಗಮಿಸಿ ಯಶಸ್ವಿಗೊಳಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮನವಿ ಮಾಡಿದರು.
ನಗರದ ವರಟನ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ಗೃಹಲಕ್ಷ್ಮಿ ಯೋಜನೆ ಕುರಿತು ಅಧಿಕಾರಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ನಡೆದ ಪೂರ್ವ ಸಿದ್ದತಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ನುಡಿದಂತೆ ನಡೆದಿದೆ. ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದ್ದು, ಮನೆ ಬಾಗಿಲಿಗೆ ಪ್ರಯೋಜನ ತಲುಪಿಸುತ್ತಿದ್ದೇವೆ. ಮಹಿಳೆಯರ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ 2 ಸಾವಿರ ರೂ. ಜಮೆ ಮಾಡುವ ಕಾರ್ಯಕ್ರಮ ಅನುಷ್ಠಾನ ಮಾಡುತ್ತಿದೆ. ಈ ಬೃಹತ್ ಕಾರ್ಯಕ್ರಮ ಮೈಸೂರಿನಲ್ಲಿ ಆಗಸ್ಟ್ 30ರಂದು ಚಾಲನೆಗೊಳ್ಳಲಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಫಲಾನುಭವಿಗಳನ್ನು ಆಹ್ವಾನಿಸಿ ಕರೆತರುವಂತೆ ಸಚಿವರು ತಿಳಿಸಿದರು.
ಗೃಹಲಕ್ಷ್ಮಿ ಯೋಜನೆ ನೋಂದಣಿಯಲ್ಲಿ ಇಡೀ ರಾಜ್ಯದಲ್ಲೇ ಚಾಮರಾಜನಗರ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಇದರ ಶ್ರೇಯಸ್ಸು ಎಲ್ಲ ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿ ಸಿಬ್ಬಂದಿಗೆ ಸೇರಬೇಕು.
ಶ್ರೇಯಸ್ಸಿನ ಸಿಂಹಪಾಲು ಅಂಗನವಾಡಿ ಕಾರ್ಯಕರ್ತೆಯರಿಗೆ ಸಲ್ಲುತ್ತದೆ. ನಗರ, ಗ್ರಾಮ ಮಟ್ಟದಲ್ಲಿ ಯೋಜನೆ ಬಗ್ಗೆ ಮನೆ ಮನೆಗೆ ತಿಳಿಸಿ ಯೋಜನೆಯಡಿ ನೋಂದಣಿಗೆ ಶ್ರಮ ವಹಿಸಿದವರಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರಮುಖ ಪಾತ್ರವಿದೆ ಎಂದರು.
ರಾಜ್ಯ ಸರ್ಕಾರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಿದೆ. ಪ್ರತಿ ಮಹಿಳೆ ಸ್ವಾವಲಂಬಿಯಾಗಬೇಕು. ತನ್ನ ಶಕ್ತಿಯ ಮೇಲೆ ನಿಲ್ಲಬೇಕು ಎಂಬ ಉದ್ದೇಶದಿಂದ ಸರ್ಕಾರ ಪ್ರತಿ ತಿಂಗಳು 2 ಸಾವಿರ ರೂ.ಗಳ ನೆರವನ್ನು ಗೃಹಲಕ್ಷ್ಮಿ ಯೋಜನೆಯಡಿ ನೀಡಲಿದೆ. ಈ ಹಣದಿಂದ ಮಹಿಳೆಯರ ಗೃಹ ಬಳಕೆಗೆ, ಮಕ್ಕಳ ವಿದ್ಯಾಭ್ಯಾಸಕ್ಕೆ, ಕುಟುಂಬದ ಔಷಧ ಖರ್ಚಿಗೆ ಅನುಕೂಲವಾಗಬಹುದು ಎಂದು ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮುಖ್ಯಮಂತ್ರಿಯವರು ವಾಗ್ದಾನ ನೀಡಿದಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ಮುಂದಾಗಿದ್ದಾರೆ. ರಾಜ್ಯ ಸರ್ಕಾರದ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಯಂತಹ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಯೋಜನೆಗಳು ಮಹಿಳೆಯರಿಗೆ ಅನುಕೂಲ ಮಾಡಿಕೊಡುವ ಉದ್ದೇಶದ್ದಾಗಿದೆ. ಬಡವರ ಪರ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ದವಾಗಿದ್ದು ಆಗಸ್ಟ್ 30ರಂದು ಚಾಲನೆಗೊಳ್ಳಲಿರುವ ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಫಲಾನುಭವಿಗಳು ಪಾಲ್ಗೊಳ್ಳಬೇಕು ಎಂದರು.
ಶಾಸಕರಾದ ಹೆಚ್.ಎಂ. ಗಣೇಶ್ ಪ್ರಸಾದ್ ಅವರು ಮಾತನಾಡಿ ಗೃಹಲಕ್ಷ್ಮಿ ಯೋಜನೆ ನೋಂದಣಿಯಲ್ಲಿ ಗುಂಡ್ಲುಪೇಟೆ ತಾಲೂಕು ಸಹ ಹೆಚ್ಚಿನ ಪ್ರಗತಿಯಾಗಿದೆ. ಮಹಿಳಾ ಫಲಾನುಭವಿಗಳಿಗೆ ನೆರವಾಗುವ ಈ ಪ್ರಮುಖ ಯೋಜನೆಯಲ್ಲಿ ಹೆಚ್ಚು ಜನರು ಪಾಲ್ಗೊಳ್ಳಬೇಕು. ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿಯವರಾದ ಸಿ.ಟಿ. ಶಿಲ್ಪಾನಾಗ್ ಅವರು ಮಾತನಾಡಿ ಮಹಿಳೆಯರಿಗಾಗಿ ಸರ್ಕಾರ ರೂಪಿಸಿದ ಗೃಹಲಕ್ಷ್ಮಿ ಯೋಜನೆ ನೋಂದಣಿಯಲ್ಲಿ ಚಾಮರಾಜನಗರ ಜಿಲ್ಲೆ ಶೇ. 88ರಷ್ಟು ಪ್ರಗತಿ ಸಾಧಿಸಿದ್ದು, ಇದಕ್ಕೆ ಸಚಿವರು, ಶಾಸಕರು ಸೇರಿದಂತೆ ಜನಪ್ರನಿಧಿಗಳ ಮಾರ್ಗದರ್ಶನ ಉತ್ತೇಜನ ಕಾರಣವಾಗಿದೆ. ಯೋಜನೆ ತಲುಪಲು ಎಲ್ಲರು ಒಟ್ಟಾಗಿ ಕೆಲಸ ಮಾಡೋಣ ಎಂದರು.
ಇದೇ ವೇಳೆ ಆಗಸ್ಟ್ 30ರಂದು ಮೈಸೂರಿನಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ಆಹ್ವಾನಿಸುವ ಆಹ್ವಾನ ಪತ್ರಿಕೆಯನ್ನು ಸಚಿವರು, ಶಾಸಕರ, ಗಣ್ಯರು ಬಿಡುಗಡೆ ಮಾಡಿದರು.
ಇದೇ ಸಂದರ್ಭದಲ್ಲಿ ನಿವೃತ್ತಿಯಾಗಲಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸರಸ್ವತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಗೀತಾ ಲಕ್ಷ್ಮಿ, ಇತರರು ಉಪಸ್ಥಿತರಿದ್ದರು.