ನಾಳೆ ಜೇವರ್ಗಿಯಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶ

ಕಲಬುರಗಿ,ಏ.30: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇದೇ ಮೇ 1ರಂದು ಸಂಜೆ 5ಕ್ಕೆ ಜೇವರ್ಗಿಯ ಅಂಬೇಡ್ಕರ್ ಭವನ ಹಿಂಭಾಗದ ಆವರಣದಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ(ಕೆ.ಕೆ.ಆರ್.ಡಿ.ಬಿ) ಅಧ್ಯಕ್ಷ ಡಾ.ಅಜಯಸಿಂಗ್ ಹೇಳಿದರು.
ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರವಾಗಿ ಪ್ರಚಾರ ಕೈಗೊಳ್ಳಲು ಈ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ.ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸೇರಿದಂತೆ ಕಾಂಗ್ರೆಸ್ ಪಕ್ಷದ ರಾಜ್ಯದ ವಿವಿಧ ಪ್ರಮುಖ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.
ರಾಜ್ಯದ 223 ತಾಲೂಕುಗಳಲ್ಲಿ ತೀವ್ರ ಬರ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಪದೇಪದೆ ಮನವಿ ಸಲ್ಲಿಸಿದರೂ ಕೇಂದ್ರ ಸರಕಾರ ಸ್ಪಂದಿಸದ ಕಾರಣ ಸುಪ್ರೀಂಕೋರ್ಟ್ ಮಧ್ಯಸ್ಥಿಕೆ ವಹಿಸಬೇಕಾಯಿತು. ಈಗ ಕೇವಲ ರೂ.3454 ಕೋಟಿ ಬಿಡುಗಡೆ ಮಾಡಿದೆ. ಬರದ ತೀವ್ರತೆಯ ಹಿನ್ನೆಲೆಯಲ್ಲಿ ರೂ. 18171 ಕೋಟಿ ಪರಿಹಾರ ನೀಡುವಂತೆ ರಾಜ್ಯ ಸರಕಾರ ಮನವಿ ಸಲಿಸಿತ್ತು. ಕೇಂದ್ರ ಸರಕಾರ ರೈತರ ಬದುಕಿನೊಂದಿಗೆ ರಾಜಕೀಯ ಮಾಡಬಾರದು. ಇಷ್ಟಾದರೂ ಕೇಂದ್ರ ಸರಕಾರ ಹೀಗೆ ರೈತರೊಂದಿಗೆ ಚೆಲ್ಲಾಟ ಆಡುತ್ತಿದೆ ಎಂದು ಡಾ.ಅಜಯ್ ಟೀಕಿಸಿದರು.ರಾಜ್ಯದಲ್ಲಿ 35 ಸಾವಿರ ಕೋಟಿ ಬೆಳೆ ಹಾನಿಯಾಗಿದೆ. 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಇಷ್ಟಾದರೂ ಕೇಂದ್ರ ಸರಕಾರ ಗಂಭೀರವಾಗಿ ವರ್ತಿಸುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಎಲ್ಲ ಎಂಟು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಸೃಷ್ಟಿಯಾಗಿದೆ. ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಭಾಗದಲ್ಲಿ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ ಮಹಿಳೆಯರು ಕಾಂಗ್ರೆಸ್ ಪರವಾಗಿ ಒಲವು ತೋರುತ್ತಿದ್ದಾರೆ. ಇದರ ಜೊತೆಗೆ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ನಾರಿ ನ್ಯಾಯ್ ಭರವಸೆ ಅಡಿಯಲ್ಲಿ ಪ್ರತಿ ಕುಟುಂಬದ ಮಹಿಳೆಗೆ ವಾರ್ಷಿಕ ಒಂದು ಲಕ್ಷ ರೂ. ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕಲಬುರಗಿ ಸೇರಿದಂತೆ ರಾಜ್ಯದಲ್ಲಿ 15ರಿಂದ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್, ಕಾಂಗ್ರೆಸ್ ಯುವ ಮುಖಂಡ ಚೇತನ್ ಗೋನಾಯಕ್, ನೀಲಕಂಠ ಮುಲಗೆ, ಶ್ಯಾಂ ನಾಟಿಕಾರ್, ಪವನ್ ಕುಮಾರ್ ವಳಕೇರಿ, ಪರಮೇಶ್ವರ ಸೇರಿದಂತೆ ಇತರರಿದ್ದರು.