ನಾಳೆ ಮತಎಣಿಕೆ; ಅಭ್ಯರ್ಥಿಗಳ ಚಿತ್ತ ಫಲಿತಾಂಶದತ್ತ

ದಾವಣಗೆರೆ.ಮೇ.೧೨: ರಾಜ್ಯ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದಿದೆ. ಈಗಾಗಲೇ ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಬರೆದಿದ್ದಾರೆ. ಎಲ್ಲಾ ಅಭ್ಯರ್ಥಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ. ನಾಳೆ ದಾವಣಗೆರೆ ವಿಶ್ವವಿದ್ಯಾ‌ನಿಲಯದಲ್ಲಿ ಮತ ಎಣಿಕೆ ನಡೆಯಲಿದೆ. ಇದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ದಾವಣಗೆರೆ ಉತ್ತರ, ದಾವಣಗೆರೆ ದಕ್ಷಿಣ, ಜಗಳೂರು, ಮಾಯಕೊಂಡ, ಹೊನ್ನಾಳಿ, ಚನ್ನಗಿರಿ, ಹರಿಹರದಲ್ಲಿ ತೀವ್ರ ಪೈಪೋಟಿ ನಡೆಸಿರುವ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ಫಲಿತಾಂಶಕ್ಕಾಗಿ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮತ್ತು ಬಂಡಾಯ ಅಭ್ಯರ್ಥಿಗಳಂತೂ ಜನರು ಯಾರಿಗೆ ಮತ ಹಾಕಿದ್ದಾರೆ ಎಂಬ ಕುತೂಹಲದಿಂದ ಇದ್ದಾರೆ. ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳು ತಮ್ಮದೇ ಆದ ಲೆಕ್ಕಾಚಾರದಲ್ಲಿ ನಿರತರಾಗಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.ಮತ್ತೊಂದೆಡೆ ಕೆಲವರು ತಮ್ಮ ಪಕ್ಷದ ಅಭ್ಯರ್ಥಿಗಳೇ ಗೆಲ್ಲುತ್ತಾರೆ ಬೆಟ್ಟಿಂಗ್ ಕಟ್ಟಿದ್ದಾರೆ. ಈಗಲೂ ಕಟ್ಟುತ್ತಲೇ ಇದ್ದಾರೆ ಎಂದು ಹೇಳಲಾಗುತ್ತಿದೆ. ಕೆಲವರು ಲಕ್ಷಾಂತರ ರೂಪಾಯಿ ಕಟ್ಟಿದರೆ, ಮತ್ತೆ ಕೆಲವರು ಬೈಕ್, ಬಂಗಾರವನ್ನೂ ಜೂಜಿಗೆ ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಒಟ್ಟಾರೆ ನಾಳಿನ ಫಲಿತಾಂಶದ ಬಗ್ಗೆ ಜಿಲ್ಲೆಯ ಜನತೆ ಕುತೂಹಲದಿಂದ ಎದುರು ನೋಡುತ್ತಿದ್ದಾರೆ.