ನಾಳೆ ಶಿವಮೊಗ್ಗಕ್ಕೆ ಮೋದಿ

ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಮಾ. ೧೮ ರಂದು ನಡೆಯಲಿರುವ ಬಿಜೆಪಿ ಪಕ್ಷದ ಬೃಹತ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಸಂಸದ ಬಿ ವೈ ರಾಘವೇಂದ್ರ ಅವರು ಸಮಾವೇಶ ಸ್ಥಳದಲ್ಲಿನ ಪೂರ್ವಭಾವಿ ಸಿದ್ದತೆಗಳ ಪರಿಶೀಲನೆ ನಡೆಸಿದರು.

ಶಿವಮೊಗ್ಗ, ಮಾ. ೧೭: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ದಿನದಿಂದ ದಿನಕ್ಕೆ ಕಾವೇರಲಾರಂಭಿಸಿದೆ. ಮಾರ್ಚ್ ೧೮ ರಂದು ಶಿವಮೊಗ್ಗ ನಗರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿ ಪಕ್ಷದ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗುತ್ತಿದ್ದಾರೆ.
ಸಮಾವೇಶಕ್ಕೆ ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಲಕ್ಷಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಹೇಳಲಾಗಿದೆ.
ಈಗಾಗಲೇ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ ಸೇರಿದಂತೆ ಸ್ಥಳೀಯ ಬಿಜೆಪಿ ಪಕ್ಷದ ಮುಖಂಡರು ಸಮಾವೇಶ ಸ್ಥಳಕ್ಕೆ ಭೇಟಿ ನೀಡಿ ಪೂರ್ವಭಾವಿ ಸಿದ್ಧತೆಗಳ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಗೊಂದಲ ಗಡಿಬಿಡಿಗೆ ಆಸ್ಪದವಾಗದಂತೆ ಸಕಲ ಪೂರ್ವಭಾವಿ ಸಿದ್ಧತೆಗಳನ್ನು ಬಿಜೆಪಿ ಮಾಡಿಕೊಂಡಿದೆ.
ಬಿಗಿ ಪಹರೆ : ಸಮಾವೇಶ ನಡೆಯುವ ಸ್ಥಳದ ಸುತ್ತಮುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ನೂರಾರು ಪೊಲೀಸರನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ.
ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಮತ್ತು ಪರ್ಸ್ ಗಳನ್ನು ಹೊರತು ಪಡಿಸಿ ನೀರಿನ ಬಾಟಲಿ, ಬ್ಯಾಗ್, ಪೇಪರ್ (ಚೀಟಿ), ಪೆನ್, ಕಪ್ಪು ಬಣ್ಣದ ಬಟ್ಟೆ / ಶರ್ಟ್ / ಕರವಸ್ತ್ರ, ಪ್ಲೇ ಕಾರ್ಡ್, ಬೆಂಕಿ ಪೊಟ್ಟಣ / ಲೈಟರ್, ಸ್ಪೋಟಕ, ಅಪಾಯಕಾರಿ ವಸ್ತುಗಳನ್ನು ತರುವಂತಿಲ್ಲ ಎಂದು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.