ನಾಳೆ ಸಿಇಟಿ ಪರೀಕ್ಷೆ

ಬೆಂಗಳೂರು,ಮೇ.೧೯- ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿರುವ ನಾಳೆಯೇ, ಸಿಇಟಿ ಪರೀಕ್ಷೆ ಕೂಡ ನಿಗಧಿಯಾಗಿರುವುದರಿಂದ ವಿದ್ಯಾರ್ಥಿಗಳಿಗೆ ಟ್ರಾಫಿಕ್ ಬಿಸಿ ತಟ್ಟುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಕೆಇಎ ( ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ನಗರ ಸಂಚಾರ ಪೊಲೀಸರ ಮೊರೆ ಹೋಗಿದ್ದು, ಪರ್ಯಾಯ ವ್ಯವಸ್ಥೆಯನ್ನು ಮಾಡುವಂತೆ ಕೋರಿದೆ ಎನ್ನಲಾಗಿದೆ. ಯಾವ ಯಾವ ಸ್ಥಳಗಳಲ್ಲಿ ಟ್ರಾಫಿಕ್ ಸಮಸ್ಯೆ ಆಗುತ್ತೆ ಎಂಬುದನ್ನು ಮನಗಂಡು ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಮನವಿ ಮಾಡಿದೆ.
ಮಧ್ಯಾಹ್ನ ೧೨.೩೦ಕ್ಕೆ ಸಿಎಂ, ಡಿಸಿಎಂ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಕೆಎಇ ಸಂಚಾರ ಪೊಲೀಸರ ಮೊರೆ ಹೋಗಿದೆ. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಮೂಲೆ ಮೂಲೆಗಳಿಂದ ಪಕ್ಷದ ಕಾರ್ಯಕರ್ತರು, ಜನರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ತುಮಕೂರು ರಸ್ತೆ, ಮೈಸೂರು ರಸ್ತೆ, ಬಳ್ಳಾರಿ ರಸ್ತೆ ಸೇರಿದಂತೆ ನಗರದ ಬಹುತೇಕ ಎಲ್ಲ ಭಾಗಗಳ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಸುಗಮ ಸಂಚಾರಕ್ಕೆ ಸಮಸ್ಯೆಯಾಗುವ ಸಾಧ್ಯತೆ ಇದೆ.
ಈ ಬಾರಿಯ ಸಿಇಟಿಗೆ ೨.೬೧ ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ರಾಜ್ಯಾದ್ಯಂತ ೫೬೨ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಪೈಕಿ ಬೆಂಗಳೂರಿನಲ್ಲೇ ೧೨೧ ಕೇಂದ್ರಗಳಿವೆ. ಕಂಠೀರವ ಕ್ರೀಡಾಂಗಣದ ಸುತ್ತಮುತ್ತಲ ಕೆಲ ಕಾಲೇಜುಗಳನ್ನು ಪರೀಕ್ಷಾ ಕೇಂದ್ರಗಳಾಗಿ ಗುರುತಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಟ್ರಾಫಿಕ್ ಬಿಸಿ ತಗುಲುವ ಸಾಧ್ಯತೆ ಇದೆ.