ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ: ಓರ್ವ ಸಾವು

ಸಿರಾ, ಜು. ೨೦- ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಬೊಲೆರೋ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಮತ್ತೋರ್ವ ಗಾಯಗೊಂಡಿರುವ ಘಟನೆ ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯ ಕಾಮತ್ ಹೋಟೆಲ್ ಬಳಿ ಇಂದು ಬೆಳಿಗ್ಗೆ ನಡೆದಿದೆ.
ಜೋಸೆಫ್ (೫೪) ಎಂಬುವರೇ ಮೃತಪಟ್ಟಿರುವ ದುರ್ದೈವಿ. ಇಂದು ಬೆಳಿಗ್ಗೆ ೬.೩೦ ರ ಸಮಯದಲ್ಲಿ ಕಾಮತ್ ಹೋಟೆಲ್ ಹತ್ತಿರ ರಸ್ತೆ ಪಕ್ಕದಲ್ಲಿ ಲಾರಿಯೊಂದು ನಿಂತಿತ್ತು. ನಿಂತಿದ್ದ ಈ ಲಾರಿಗೆ ಸಿರಾ ಕಡೆಯಿಂದ ಬಂದ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಾಲಕ ವಾಹನದಲ್ಲಿ ಸಿಲುಕಿಕೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೋರ್ವ ಬಾಲು (೪೪) ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಸಿರಾ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಘಟನೆಯ ಸುದ್ದಿ ತಿಳಿದ ಕೂಡಲೇ ಕಳ್ಳಂಬೆಳ್ಳ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.