ನಿಗದಿತ ಅವಧಿಯೊಳಗೆ ಗುರಿ ಸಾಧನೆಗೆ ಮುಂದಾಗಿ

ಗದಗ, ಜು.30: ಜಿಲ್ಲೆಯ ವಿವಿಧ ಇಲಾಖೆಗಳಿಗೆ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಉಪಯೋಜನೆಯಡಿ ನಿಗದಿಪಡಿಸಲಾದ ಗುರಿಯ ಆರ್ಥಿಕ ಹಾಗೂ ಭೌತಿಕ ಸಾಧನೆಗಾಗಿ ಅಧಿಕಾರಿಗಳು ಮುಂದಾಗಬೇಕೆಂದು ಪ್ರಭಾರಿ ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ ಅವರು ಹೇಳಿದರು.
ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜರುಗಿದ ಎಸ್.ಸಿ.ಪಿ/ ಟಿ.ಎಸ್.ಪಿ. ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಇಲಾಖಾಧಿಕಾರಿಗಳಿಗೆ ಅಗತ್ಯದ ನಿರ್ದೇಶನಗಳನ್ನು ನೀಡಿದರು.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಉಪಯೋಜನೆಯಡಿ ನಿಗದಿಪಡಿಸಿದ ಕಾಮಗಾರಿ ಹಾಗೂ ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಇರಲಿ. ಯಾವುದೇ ಕಾರಣಕ್ಕೂ ನಿಗದಿತ ಅವಧಿಯೊಳಗೆ ಯೋಜನೆಯ ಗುರಿ ಸಾಧನೆ ಮಾಡುವುದು ಕಡ್ಡಾಯವಾಗಿದೆ. ತಪ್ಪಿದಲ್ಲಿ ಇಲಾಖೆಯ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಯೋಜನೆಯಡಿ ನೀಡಲಾದ ಅನುದಾನ ಪ್ರಸಕ್ತ ವರ್ಷದಲ್ಲಿಯೇ ಬಳಕೆಯಾಗಬೇಕು. ಯಾವುದೇ ಕಾರಣಕ್ಕೂ ಅನುದಾನ ಹಿಂದಿರುಗಿ ಹೋಗದಂತೆ ಮುಂಜಾಗ್ರತೆ ವಹಿಸಬೇಕು. ಎಸ್.ಸಿ.ಪಿ/ ಟಿ.ಎಸ್.ಪಿ. ಕಾಮಗಾರಿಗಳು ಉತ್ತಮ ಗುಣಮಟ್ಟದಿಂದ ಕೂಡಿರಬೇಕು ಹಾಗೂ ಕಾಮಗಾರಿಗಳನ್ನು ಪರಿಶಿಷ್ಟ ಜಾತಿ : ಪಂಗಡದ ಕಾಲೋನಿಗಳಲ್ಲಿಯೇ ಕೈಗೊಳ್ಳುವ ಮೂಲಕ ಸರ್ಕಾರದ ಉದ್ದೇಶ ಪೂರೈಕೆಗೆ ಅಧಿಕಾರಿಗಳು ಶ್ರಮಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ , ಜಿ.ಪಂ. ಮುಖ್ಯ ಯೋಜನಾಧಿಕಾರಿ ವಾಗೀಶ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವಲಿಂಗಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ , ಡಿಡಿಎಲ್‍ಆರ್ ರವಿಕುಮಾರ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟಪ್ಪನವರ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.