ನಿಗಧಿತ ಅವಧಿಯಲ್ಲಿ ದುರಸ್ತಿ ಕಾರ್ಯ ಪೂರ್ಣಗೊಳಿಸಲು ಸೂಚನೆ

ಗದಗ ಏ 24 : ಜಿಲ್ಲೆಯಲ್ಲಿನ ರಸ್ತೆ ದುರಸ್ತಿ , ಕೆರೆ ಅಭಿವೃದ್ಧಿ , ಚೆಕ್ ಡ್ಯಾಂ ದುರಸ್ತಿ , ಶಾಲಾ ಕೊಠಡಿಗಳ ದುರಸ್ತಿ ಕಾರ್ಯಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ಈರಪ್ಪ ನಾಡಗೌಡ್ರ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೆರೆ ಹಾನಿಗೊಳಗಾದ ರೋಣ ತಾಲೂಕಿನ ಹೊಳೆ ಹಡಗಲಿ , ಮಾಳವಾಡ, ಯಾವಗಲ್ , ಯಾ.ಸ.ಹಡಗಲಿ ಗ್ರಾಮಗಳಲ್ಲಿ ರಸ್ತೆ ದುರಸ್ತಿ ಕಾರ್ಯಕ್ಕೆ ಪಂಚಾಯತ್ ರಾಜ್ ಇಂಜನೀಯರಿಂಗ್ ವಿಭಾಗ ( ಪಿ ಆರ್ ಇ ಡಿ) ದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಜಲಾಮೃತ ಯೋಜನೆಯಡಿ ಮೆಣಸಗಿ ಗ್ರಾಮದ ಕೆರೆ ಅಭಿವೃದ್ಧಿ ಕಾರ್ಯ ಇನ್ನೂ ಪೂರ್ಣಗೊಂಡಿರುವುದಿಲ್ಲ. ಕೆರೆ ಅಭಿವೃದ್ಧಿ ಕಾರ್ಯವನ್ನು ಸಂಬಂಧಿತ ಇಲಾಖೆ ಅಧಿಕಾರಿಗಳು ಪೂರ್ಣಗೊಳಿಸಬೇಕೆಂದು ಸೂಚಿಸಿದರು. ನೆರೆ ಹಾನಿಗೊಳಗಾದ ಹೊಳೆ ಆಲೂರು ಗ್ರಾಮಗಳಲ್ಲಿ ಶಾಲಾ ಕಟ್ಟಡಗಳು ಯಾವ ಹಂತದಲ್ಲಿವೆ ಎಂಬುದರ ಮಾಹಿತಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಒದಗಿಸಲು ಜಿಲ್ಲಾ ಪಂಚಾಯತ್ ಅಧ್ಯಕ್ಷರು ಸೂಚಿಸಿದರು.
ಕೋವಿಡ್-19 ಸೋಂಕು ನಿಯಂತ್ರಣಕ್ಕೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಹಭಾಗಿತ್ವ ಅವಶ್ಯಕವಾಗಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲರೂ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯವಾಗಿದೆ. ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸರ್ಕಾರದ ಮಾರ್ಗಸೂಚಿ ಪಾಲನೆ ಮಾಡಬೇಕು. ಅರ್ಹರೆಲ್ಲರೂ ಲಸಿಕೆ ಪಡೆಯುವ ಮೂಲಕ ಸೋಂಕನಿಂದಾಗುವ ಜೀವ ಹಾನಿ ತಪ್ಪಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಮಂಜುಳಾ ಹುಲ್ಲಣ್ಣವರ ಮಾತನಾಡಿ ನೆರೆ ಹಾನಿಗೊಳಗಾದ ಕ್ಷೇತ್ರ ಹಾಗೂ ಜಿಲ್ಲೆಯ ಉಳಿದೆಡೆ ಶಾಲೆ ಕಟ್ಡಡಗಳ ಸ್ಥಿತಿಗತಿ ಹಾಗೂ ದುರಸ್ತಿ ಕಾರ್ಯ ಯಾವ ಹಂತದಲ್ಲಿದೆ ಎಂಬುದರ ಕುರಿತು ಪರಿಶೀಲನೆ ಅಗತ್ಯವಾಗಿದ್ದು ಈ ಕುರಿತು ಥರ್ಡ ಪಾರ್ಟಿ ತಪಾಸಣೆ ನಡೆಸಬೇಕು. ದುರಸ್ತಿ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಈ ಕುರಿತು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸಲಿಂಗಪ್ಪ ಮಾತನಾಡಿ ಕೋವಿಡ್ -19 ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ಈಗಾಗಲೇ ಆನ್‍ಲೈನ್ ಮೂಲಕ ಶಿಕ್ಷಣ ನೀಡಲಾಗುತ್ತಿದೆ. ಎಲ್ಲ ಶಾಲಾ ಮುಖ್ಯೋಪಾಧ್ಯಾಯರುಗಳಿಗೆ ಶಾಲಾ ಮಕ್ಕಳು ಕಲಿಕೆಯಲ್ಲಿ ಹಿಂದುಳಿಯದ ಹಾಗೆ ನಿರಂತರ ಸಂಪರ್ಕದಲ್ಲಿದ್ದು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ ಎಂದು ಸಭೆಗೆ ತಿಳಿಸಿದರು.
2021-22 ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಗೆ ಸಭೆಯಲ್ಲಿ ಸರ್ವಾನುಮತದಿಂದ ಅನುಮೋದನೆ ನೀಡಲಾಯಿತು.
ಸಭೆ ನಡೆಯುವುದಕ್ಕೂ ಮುನ್ನ ಕೋವಿಡ್-19 ಕರ್ತವ್ಯ ನಿರ್ವಹಣೆ ಕಾರ್ಯದಲ್ಲಿ ನಿಧನ ಹೊಂದಿದ್ದ ಪಿಎಂಜಿಎಸ್‍ಯೋಜನೆಯ ಕಾರ್ಯಪಾಲಕ ಅಭಿಯಂತರ ಎಸ್.ಎಚ್. ಶ್ರೀನಿವಾಸ್ ಹಾಗೂ ಆರೋಗ್ಯ ಇಲಾಖೆಯ ವಾಹನ ಚಾಲಕರಾದ ಈರಣ್ಣ ಬುಳ್ಳಾ ಅವರಿಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಭೆಯಲ್ಲಿ ವಿವಿಧ ಸ್ಥಾಯಿ ಸಮಿತಿಯ ಅಧ್ಯಕ್ಷರು , ಜಿಲ್ಲಾ ಪಂಚಾಯತ್ ಸದಸ್ಯರುಗಳು , ತಾಲೂಕು ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ , ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಬಿ. ಕಲ್ಲೇಶ, ಆಯುಷ್ ಇಲಾಖೆಯ ಅಧಿಕಾರಿ ಡಾ. ಸುಜಾತಾ ಪಾಟೀಲ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಸಾರ್ವಜನಿಕ ಶಿಕ್ಷಣ ಇಲಾಖೆಯ ಬಾರಾಟಕ್ಕೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.