ನಿಯಮ ಪಾಲಿಸಿದರೆ ಸೋಂಕು ನಿಯಂತ್ರಿಸಬಹುದು -ತಿಮ್ಮಾರೆಡ್ಡಿ


ಬ್ಯಾಡಗಿ,ಮೇ.21: ಕೊರೋನಾ ಸೋಂಕು ಬರದಂತೆ ತಡೆಗಟ್ಟುವುದು ನಮ್ಮ ಕೈಯಲ್ಲಿದೆ. ನಾವು ಎಚ್ಚರಿಕೆಯಿಂದ ಇದ್ದು ಕೊರೋನಾ ನಿಯಮಗಳನ್ನು ಪಾಲಿಸಿದರೆ ಸಂಪೂರ್ಣವಾಗಿ ನಿಯಂತ್ರಿಸಬಹುದಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎನ್.ತಿಮ್ಮಾರೆಡ್ಡಿ ಹೇಳಿದರು.
ತಾಲೂಕಿನ ಕಲ್ಲೇದೇವರು ಗ್ರಾಮದಲ್ಲಿ ಆರೋಗ್ಯ ಇಲಾಖೆ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯಿತಿಯಿಂದ ಗುರುವಾರ ನಡೆಸಿದ ಕೊರೋನಾ ಜಾಗೃತಿ ಮಾನವ ಸರಪಳಿಯ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಭೆ, ಸಮಾರಂಭ, ಕಾರ್ಯಕ್ರಮಗಳಿಗಿಂತ ಬದುಕು ಮತ್ತು ಆರೋಗ್ಯ ಮುಖ್ಯ. ನಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಿದೆ. ಸದ್ಯದ ಪರಿಸ್ಥಿತಿಯಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ನಗರ ಪ್ರದೇಶದಂತೆ ಗ್ರಾಮೀಣ ಪ್ರದೇಶಗಳಲ್ಲೂ ಹೆಚ್ಚಾಗಿ ಹರಡುತ್ತಿದೆ. ಇದರಿಂದ ತಪ್ಪಿಸಿಕೊಳ್ಳಲು ಲಸಿಕೆ ಹಾಕಿಸಿಕೊಳ್ಳುವುದು, ಕೊರೋನಾ ನಿಯಮ ಪಾಲನೆ ಮಾಡುವುದೊಂದೇ ಪರಿಹಾರ ಎಂದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಲ್ಲೇಶ ಮೋಟೆನವರ ಮಾತನಾಡಿ, ಸರ್ಕಾರ ಕೊರೋನಾ ನಿಯಂತ್ರಣಕ್ಕೆ ಹಲವು ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಕಡ್ಡಾಯವಾಗಿ ಅದನ್ನು ಪಾಲಿಸಬೇಕು. ಗ್ರಾಮ ಪಂಚಾಯಿತಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆ ಬಾಗಿಲಿಗೆ ಬಂದು ಮಾಹಿತಿ ಪಡೆದುಕೊಂಡು ಸಲಹೆ, ಸೂಚನೆಗಳನ್ನು ನೀಡುತ್ತಿದ್ದು ಅದನ್ನು ಪಾಲಿಸಬೇಕೆಂದು ಮನವಿ ಮಾಡಿದರು.
ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ, ಸಿಬ್ಬಂದಿ ವರ್ಗ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.