ನಿರಂತರ ನೀರು ಯೋಜನೆಗೆ ಸಂಪೂರ್ಣ ನೆರವು: ಸಚಿವ ಭೈರತಿ ಭರವಸೆ

ಬೆಳಗಾವಿ, ಜ.8:ನಿರಂತರ ನೀರು ಯೋಜನೆ ನಗರದ ಜನತೆಗೆ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಯೋಜನೆಯ ಅನುಷ್ಠಾನ ಕುರಿತು ವಿಶೇಷ ಕಾಳಜಿ ವಹಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆಯ ಸಚಿವರಾದ ಬಿ.ಎ.ಬಸವರಾಜ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಹಾನಗರ ಪಾಲಿಕೆಯ ಸಭಾಂಗಣದಲ್ಲಿಂದು ಶುಕ್ರವಾರ (ಜ.8) ನಡೆದ ಪಾಲಿಕೆ, ಸ್ಮಾರ್ಟ್ ಸಿಟಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು ನಿರಂತರ ನೀರು ಯೋಜನೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ನೀಡಲು ಕ್ರಮ ಕೈಗೊಳ್ಳಲಾಗುವುದು.
ಯೋಜನೆಯ ತುರ್ತು ಅನುಷ್ಠಾನಕ್ಕೆ ಅಗತ್ಯವಿರುವ ಎಲ್ಲ ನೆರವು ಸರ್ಕಾರ ನೀಡಲಿದೆ ಎಂದು ಸಚಿವ ಬಸವರಾಜ್ ಭರವಸೆಯನ್ನು ನೀಡಿದರು.
ಕಸ ಸಂಗ್ರಹಣೆಗೆ ಸಂಬಂಧಿಸಿದಂತೆ ನಗರದಲ್ಲಿ ಅಳವಡಿಸಲಾಗಿರುವ ಆರ್.ಎಫ್.ಐ.ಡಿ. ಟ್ಯಾಗ್‍ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಬಸವರಾಜ್ ಎಚ್ಚರಿಕೆ ನೀಡಿದರು.
ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರ ಸ್ವಚ್ಛವಾಗಿಡಬೇಕಾದರೆ ಕಸ ವಿಲೇವಾರಿ ವ್ಯವಸ್ಥೆ ಸಮರ್ಪಕವಾಗಿ ಇರಬೇಕು. ನಿಯಮಾವಳಿ ಉಲ್ಲಂಘಿಸಿ ಕಸ ಚೆಲ್ಲುವವರ ವಿರುದ್ಧ ದಂಡದ ಜತೆಗೆ ಪ್ರಕರಣ ದಾಖಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಿರಂತರ ನೀರು ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಳಂಬಕ್ಕೆ ಕಾರಣವಾದ ಸಂಸ್ಥೆಗೆ ದಂಡ ವಿಧಿಸಲು ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ್ ಪಾಟೀಲ ಒತ್ತಾಯಿಸಿದರು.
46 ಕೋಟಿ ರೂಪಾಯಿ ವೆಚ್ಚದ ಆರ್.ಎಫ್.ಐ.ಡಿ. ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸದ ಸಂಬಂಧಿಸಿದ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಬೇಕು ಎಂದು ಸಚಿವರಿಗೆ ಒತ್ತಾಯಿಸಿದರು.
ಕಂಟೋನ್ಮೆಂಟ್ ಪ್ರದೇಶದಲ್ಲಿ ಕಸ ವಿಲೇವಾರಿ ಕೆಲಸ ಸರಿಯಾಗಿ ನಡೆಯುತ್ತಿಲ್ಲ ಎಂದು ಶಾಸಕ ಅನಿಲ್ ಬೆನಕೆ ಅವರು ಸಚಿವರ ಗಮನಕ್ಕೆ ತಂದರು.
ಬೆಳಗಾವಿ ನಗರದಲ್ಲಿ ಯುಜಿಡಿ ವ್ಯವಸ್ಥೆ ಸುಧಾರಣೆ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಸಮಗ್ರ ಅಭಿವೃದ್ಧಿಗೆ 500 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವ ಸಿದ್ಧಪಡಿಸಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.
ಕಸ ಸಂಗ್ರಹಣೆ, ಪ್ರತ್ಯೇಕ ಮತ್ತು ವಿಲೇವಾರಿಗೆ ಪ್ರತಿ ವಾರ್ಡಿಗೆ ಪ್ರತ್ಯೇಕ ವಾಹನ ಹೊಂದುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಪಾಲಿಕೆಯ ಆಯುಕ್ತರಾದ ಜಗದೀಶ್ ತಿಳಿಸಿದರು.
45 ಕೋಟಿ ಆಸ್ತಿ ತೆರಿಗೆ ಗುರಿ:
ಈ ವರ್ಷ 45 ಕೋಟಿ ಗುರಿ ನಿಗದಿಪಡಿಸಲಾಹಿತ್ತು. ಇದುವರೆಗೆ 30 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ. ಕಳೆದ ವರ್ಷಕ್ಕಿಂತ ಐದು ಕೋಟಿ ಹೆಚ್ಚುವರಿ ಗುರಿ ನಿಗದಿಪಡಿಸಲಾಗಿದೆ ಎಂದು ಆಯುಕ್ತರಾದ ಜಗದೀಶ್ ತಿಳಿಸಿದರು.
ಕೆಯುಐಡಿಎಫ್ ಸಿ ಅಧ್ಯಕ್ಷರಾದ ಶಂಕರ್ ಪಾಟೀಲ ಮುನೇನಕೊಪ್ಪ, ಕೆಯುಡಬ್ಲ್ಯುಸಿ ನಿರ್ದೇಶಕರಾದ ದೀಪಾ ಕುಡಚಿ, ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.