ನಿಷೇಧಿತ ವಲಯ ಡೂನ್ ಶಾಲೆ


ಡೆಹ್ರಾಡೂನ್, ಏ. ೮- ಉತ್ತರಖಂಡದ ಡೆಹ್ರಾಡೂನ್ ನ ಪ್ರತಿಷ್ಠಿತ ಡೂನ್ ಶಾಲೆಯಲ್ಲಿ ಐವರು ವಿದ್ಯಾರ್ಥಿಗಳು ಮತ್ತು ೭ ಮಂದಿ ಶಿಕ್ಷಕರಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಾಲೆಯನ್ನು ನಿಷೇಧಿತ ವಲಯ ಎಂದು ಘೋಷಿಸಲಾಗಿದೆ.
ಒಂದೇ ದಿನ ೧೨ ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕ್ಯಾಂಪಸ್ ಆವರಣವನ್ನು ಸಂಪೂರ್ಣವಾಗಿ ಮುಚ್ಚಲಾಗಿದ್ದು, ಒಳಬರುವವರು ಮತ್ತು ಹೊರಬರುವವರಿಗೆ ನಿರ್ಬಂಧ ಹೇರಲಾಗಿದೆ.
ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಿ, ಡೆಹ್ರಾಡೂನ್ ಜಿಲ್ಲಾಧಿಕಾರಿ ಆಶಿಶ್ ಶ್ರೀವಾತ್ಸವ ಆದೇಶ ಹೊರಡಿಸಿದ್ದಾರೆ.
ಡೂನ್ ಶಾಲೆಯ ಆವರಣಕ್ಕೆ ಹೊರಗಿನವರು ಬರದಂತೆ, ನಿರ್ಬಂಧ ಹೇರಲಾಗಿದೆ. ಎಲ್ಲರೂ ಕಟ್ಟುನಿಟ್ಟಾಗಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಸೋಂಕು ತಗುಲಿದ ೫ ವಿದ್ಯಾರ್ಥಿಗಳು ಮತ್ತು ೭ ಶಿಕ್ಷಕರನ್ನು ಶಾಲಾ ಆವರಣದಲ್ಲಿ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.
ವಸತಿ ಶಾಲೆಯಾಗಿರುವ ಹಿನ್ನೆಲೆಯಲ್ಲಿ ವಿವಿಧ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಅವರ ಮನೆಗಳಿಗೆ ಕಳುಹಿಸಲಾಗಿದೆ. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಂಪರ್ಕಕ್ಕೆ ಬಂದವರೆಲ್ಲರ ಸೋಂಕು ಪತ್ತೆ ಪರೀಕ್ಷೆ ಮಾಡಲಾಗುತ್ತಿದೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.
ಶಾಲಾ ಆವರಣದಲ್ಲಿ ಕೊರೊನಾ ಸೋಂಕು ಹರಡುವುದನ್ನು ತಡೆಯಲು ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಶಾಲಾ ಆಡಳಿತ ಮಂಡಳಿ ಜಾರಿಗೆ ತರಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಶಾಲೆಯ ಇತರ ವಿದ್ಯಾರ್ಥಿಗಳಿಗೆ ಆರ್ ಟಿ ಪಿಸಿಆರ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ.