ನೀತಿ ಸಂಹಿತೆ ಸಡಿಲಿಕೆ ಕೋರಿ ಪತ್ರ ಬರೆಯಲು ಚಿಂತನೆ

(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು,ಮೇ ೧:ರಾಜ್ಯದಲ್ಲಿ ನೀತಿ ಸಂಹಿತೆ ಸಡಿಲಗೊಳಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ರಾಜ್ಯಸರ್ಕಾರ ಪತ್ರ ಬರೆಯಲು ಮುಂದಾಗಿದೆ. ಈಗಾಗಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದ್ದು, ಮೇ ೭ರಂದು ೨ನೇ ಹಂತದ ಮತದಾನ ನಡೆಯಲಿದೆ. ಹೀಗಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳುವ ದೃಷ್ಟಿಯಿಂದ ನೀತಿ ಸಂಹಿತೆ ಸಡಿಲಗೊಳಿಸುವಂತೆ ಸರ್ಕಾರ ಆಯೋಗಕ್ಕೆ ಮನವಿ ಮಾಡಲಿದೆ.
ದೇಶದಲ್ಲಿ ೭ ಹಂತದಲ್ಲಿ ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಇದರಿಂದಾಗಿ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧ ಬಿಕೋ ಎನ್ನುತ್ತಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಚುನಾವಣಾ ಪ್ರಚಾರದಲ್ಲಿ ನಿರತವಾಗಿದೆ.
ಆದರೆ, ಜನರ ಸಮಸ್ಯೆಗಳು ಹೆಚ್ಚಾಗಿದ್ದು, ಬಜೆಟ್ ಘೋಷಣೆ, ಬರ ಪರಿಹಾರ ಬಿಡುಗಡೆ ಮಾಡಬೇಕಾಗಿದೆ. ಇದಕ್ಕಾಗಿ ಸಚಿವ ಸಂಪುಟ ಸಭೆ ನಡೆಸಿ ತೀರ್ಮಾನ ಕೈಗೊಳ್ಳಬೇಕಾಗಿದೆ. ಆದರೆ, ಇದಕ್ಕೆಲ್ಲ ನೀತಿ ಸಂಹಿತೆ ಅಡ್ಡಿಯಾಗಿದೆ.
ಆದರೆ, ಮೇ ೭ ರಂದು ೨ನೇ ಹಂತದ ಚುನಾವಣೆಯೂ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅನುವು ಮಾಡಿಕೊಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆಯುವ ನಿರೀಕ್ಷೆ ಇದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಮಾ. ೧೬ ರಂದು ಚುನಾವಣಾ ಆಯೋಗ ಲೋಕಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿತ್ತು. ಜೂ. ೪ರವರೆಗೆ ದೇಶಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದೆ.