ನೀರಿನ ಕೊರತೆಯಾಗದಂತೆ ನೋಡಿಕೊಳ್ಳಿ: ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್ : ಮಾ.10:ಬೇಸಿಗೆ ಸಂದರ್ಭದಲ್ಲಿ ಕ್ಷೇತ್ರದ ಯಾವ ಗ್ರಾಮದಲ್ಲೂ ಕೂಡ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮಕೈಗೊಳ್ಳಿ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಅಧಿಕಾರಿಗಳಿಗೆ ಸೂಚಿಸಿದರು.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಮನ್ನಾಎಖೇಳ್ಳಿ ಗ್ರಾಮದ ಪ್ರವಾಸಿ ಮಂದಿರ (ಐಬಿ)ಯಲ್ಲಿ ಗುರುವಾರ ನಡೆದ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಜನರಿಗೆ ನೀರಿನ ಸಮಸ್ಯೆಯಗಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಲ್ಲಾ ಜಲಮೂಲಗಳನ್ನು ಬಳಸಿಕೊಂಡು ನೀರಿನ ಸಮಸ್ಯೆ ಬಗೆಹರಿಸಬೇಕು, ಸಂಬಂಧಪಟ್ಟ ಎಲ್ಲಾ ಇಲಾಖೆಯವರು ಪರಸ್ಪರ ಸಹಯೋಗದಿಂದ ಕಾರ್ಯ ನಿರ್ವಹಿಸಬೇಕು. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಸಾರ್ವಜನಿಕರಿಗೆ ಒಳಿತು ಮಾಡುವ ಬಗ್ಗೆ ಯೋಚಿಸಬೇಕು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಅಧಿಕಾರಿಗಳಿಗೆ ಸಲಹೆ ನೀಡಿದರು.

ಜೆಜೆಎಮ್ ಕಾಮಗಾರಿ ಬಗ್ಗೆ ಅಸಮಾಧಾನ:
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿರುವ ಜೆಜೆಎಮ್ ಕಾಮಗಾರಿ ಪೂರ್ಣಗೊಂಡಿಲ್ಲ. ಕೆಲ ಗ್ರಾಮಗಳಲ್ಲಿ ಕಳಪೆ ಕಾಮಗಾರಿಯಾಗಿದೆ ಎಂಬ ದೂರುಗಳಿವೆ. ಜನರಿಗೆ ಸಮರ್ಪಕವಾಗಿ ಸೌಲಭ್ಯ ಸಿಗದಿದ್ದರೆ ಅಧಿಕಾರಿಗಳೇ ಹೊಣೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಅಸಮಾಧಾನ ಹೊರ ಹಾಕಿದರು.

ಅವ್ಯವಸ್ಥೆ ಸರಿಪಡಿಸಲು ಸೂಚನೆ:
ನಿರ್ಣಾ ಮತ್ತು ಮನ್ನಾಎಖೇಳ್ಳಿ ಸಮುದಾಯ ಅರೋಗ್ಯ ಕೇಂದ್ರಗಳಲ್ಲಿನ ಅವ್ಯವಸ್ಥೆ ಸರಿಪಡಿಸಬೇಕು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ವಸತಿ, ಅರಣ್ಯ, ತೋಟಗಾರಿಕೆ, ರೇಷ್ಮೆ, ನರೇಗಾ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಚಿಟ್ಟಗುಪ್ಪಾ ತಹಸೀಲ್ದಾರ್ ರವೀಂದ್ರ ದಾಮ , ತಾಲೂಕು ಪಂಚಾಯತ್ ಇಒ ಅಕ್ರಮ್ ಪಾಷಾ, ಪಿಡಿಒ ಭಾಗ್ಯ ಜ್ಯೋತಿ, ಕೆಡಿಪಿ ಸದಸ್ಯ ಅಸದ ಪಟೇಲ್ ಸೇರಿದಂತೆ ತಾಲೂಕು ಪಂಚಾಯತ್ ಸಿಬ್ಬಂದಿಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಇದ್ದರು.