ನೀರಿನ ಕೊರತೆ ಆಗದಂತೆ ಮುಂಜಾಗ್ರತಾ ಕ್ರಮ ವಹಿಸಿ ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಲಕ್ಷ್ಮಣ ಸವದಿ ಸೂಚನೆ

ಅಥಣಿ :ಮಾ.15: ದಿನದಿಂದ ದಿನಕ್ಕೆ ಬಿಸಿಲಿನ ತಾಪ ಅಧಿಕವಾಗುತ್ತಿದ್ದು, ತಾಲೂಕಿನಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಕೊರತೆಯಾಗದಂತೆ ನಿಗಾವಹಿಸಬೇಕು, ಅಗತ್ಯವಿರುವ ಗ್ರಾಮಗಳಲ್ಲಿ ಜನರಿಗೆ ಕುಡಿಯುವ ನೀರನ್ನು ಟ್ಯಾಂಕರ್ ಗಳ ಮೂಲಕ ಪೂರೈಸಲು ವ್ಯವಸ್ಥೆ ಕಲ್ಪಿಸಬೇಕು. ನೀರಿನ ಮೂಲಗಳ ಬಗ್ಗೆ ಮಾಹಿತಿ ಪಡೆದುಕೊಂಡು ಅಧಿಕಾರಿಗಳು ಈಗಿನಿಂದಲೇ ಮುಂಜಾಗೃತಿ ವಹಿಸಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಅವರು ಪಟ್ಟಣದ ತಾಲೂಕಾ ಪಂಚಾಯತ ಸಭಾಂಗಣದಲ್ಲಿ ಬರಗಾಲ ಹಿನ್ನೆಲೆಯಲ್ಲಿ ಟಾಸ್ಕ್ ಫೆÇೀರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಯಾವುದೇ ಕಾರಣಕ್ಕೂ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಆಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು. ತಾಲೂಕಿನ ಪೂರ್ವ ಭಾಗದ ತೆಲಸಂಗ ಹೋಬಳಿಯಲ್ಲಿ ಉತ್ತರ ಭಾಗದ ಅನಂತಪುರ ಹೋಬಳಿಯಲ್ಲಿನ ಅನೇಕ ಗ್ರಾಮಗಳ ತೋಟದ ವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ದೂರು ಬರುತ್ತಿದ್ದು, ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಸೂಚನೆ ನೀಡುವ ಮೂಲಕ ಜನರಿಗೆ ಯಾವುದೇ ರೀತಿಯ ನೀರಿನ ತೊಂದರೆ ಆಗದಂತೆ ಪರ್ಯಾಯ ವ್ಯವಸ್ಥೆ ಮಾಡಬೇಕು. ಮುಂಬರುವ ದಿನಗಳಲ್ಲಿ ರೈತರ ಜಾನುವಾರುಗಳಿಗೆ ಮೇವಿನ ಸಮಸ್ಯೆ ಆಗದಂತೆ ಕೂಡಲೇ ಮೇವು ಬ್ಯಾಂಕ್ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಟ್ಯಾಂಕರುಗಳ ಮೂಲಕ ನೀರು ಸರಬರಾಜು ಮಾಡುವಲ್ಲಿ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಸಮರ್ಪಕ ನೀರು ಪೂರೈಕೆಗೆ ಕ್ರಮ
ವಹಿಸಬೇಕು. ಟಾಸ್ಕ್ ಫೆÇೀರ್ಸ್ ಸಮಿತಿಯ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಹೆಚ್ಚು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು. ನೀರಿಗೆ ಸಂಬಂಧಿಸಿದ ದೂರುಗಳು ಬಂದಲ್ಲಿ ತಕ್ಷಣವೇ ಪರ್ಯಾಯ ವ್ಯವಸ್ಥೆ ಕೈಗೊಳ್ಳಬೇಕು. ಅಧಿಕಾರಿಗಳಿಗೆ ಯಾವುದೇ ತಾಂತ್ರಿಕ ಸಮಸ್ಯೆಗಳು ಬಂದಲ್ಲಿ, ನನ್ನ ಗಮನಕ್ಕೆ ತನ್ನಿ ನಾನು ಮೇಲಧಿಕಾರಿಗಳ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ಈ ವೇಳೆ ತಹಸೀಲ್ದಾರ ವಾಣಿ ಯು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ, ಜಿಪಂ ಎಂಜಿನಿಯರಿಂಗ್ ವಿಭಾಗದ ಅಧಿಕಾರಿ ವೀರಣ್ಣ ವಾಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಬಿ ಮೋರಟಗಿ. ತಾಲೂಕು ವೈದ್ಯಾಧಿಕಾರಿ ಡಾ. ಬಸವಗೌಡ ಕಾಗೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ರವೀಂದ್ರ ಮುರುಗಾಲಿ. ಸಿಡಿಪಿಓ ರೇಣುಕಾ ಹೊಸಮನಿ. ಶ್ರೀಕಾಂತ ಮಾಕಾಣಿ. ಸೇರಿದಂತೆ ಇತರರು ಉಪಸ್ಥಿತರಿದ್ದರು.