ನೂತನ ಜಿಲ್ಲಾಧಿಕಾರಿಯಾಗಿ ಸಿ.ಟಿ. ಶಿಲ್ಪಾನಾಗ್ ಅಧಿಕಾರ ಸ್ವೀಕಾರ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಜು.12:- ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿ.ಟಿ. ಶಿಲ್ಪಾನಾಗ್ ಅವರು ಇಂದು ಅಧಿಕಾರ ವಹಿಸಿಕೊಂಡರು.
ನಗರದ ಜಿಲ್ಲಾಧಿಕಾರಿ ಕಚೇರಿಗೆ ಇಂದು ಬೆಳಿಗ್ಗೆ ಆಗಮಿಸಿದ ನೂತನ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಾಧಿಕಾರಿ ಎಸ್. ಪೂವಿತಾ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಗೀತಾ ಹುಡೇದ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು. ಬಳಿಕ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಪ್ರಭಾರ ಜಿಲ್ಲಾಧಿಕಾರಿ ಎಸ್. ಪೂವಿತಾ ಅವರಿಂದ ಅಧಿಕಾರ ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಚಾಮರಾಜನಗರ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ಬಂದಿರುವುದು ಸಂತಸದ ವಿಷಯವಾಗಿದೆ. ಇತರೆ ಇಲಾಖೆಗಳಲ್ಲಿ ವಿವಿಧ ಹಂತಗಳಲ್ಲಿ ಕೆಲಸ ಮಾಡಿದ್ದೇನೆ. ಉಪವಿಭಾಗಾಧಿಕಾರಿ, ನಗರ ಪಾಲಿಕೆಯ ಆಯುಕ್ತರಾಗಿ ಹಾಗೂ ಗ್ರಾಮೀಣಾಭಿವೃದ್ದಿ ಮತ್ತುಇಲಾಖೆಯ ಆಯುಕ್ತರಾಗಿಯೂ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದೇನೆ ಎಂದರು.
ಚಾಮರಾಜನಗರ ಜಿಲ್ಲೆ ಪ್ರಕೃತಿ, ವನ್ಯಜೀವಿ ಸಂಪತ್ತು ಹೊಂದಿರುವ ಸುಂದರ ಜಿಲ್ಲೆ. ಇಲ್ಲಿ ಒಳ್ಳೆಯ ಕೆಲಸ ಮಾಡಲು ಉತ್ತಮ ವೇದಿಕೆ ಇದೆ. ಉತ್ತಮ ಕರ್ತವ್ಯ ನಿರ್ವಹಿಸಲು ಜನರು ಹಾಗೂ ಜನಪ್ರತಿನಿಧಿಗಳ ಉತ್ತೇಜನ ನೀಡುತ್ತಾರೆ ಎಂಬ ವಿಶ್ವಾಸ ಹೊಂದಿದ್ದೇನೆ. ಜೊತೆಗೆ ಅಧಿಕಾರಿಗಳ ಸಮನ್ವಯ ಸಹಕಾರದಿಂದ ಜಿಲ್ಲೆಯಲ್ಲಿ ಜನರಿಗೆ ಸಕಾರಾತ್ಮಕವಾಗಿ ಸೇವೆ ಸಲ್ಲಿಸಲು ಮುಂದಾಗಲಿದ್ದೇನೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಜಿಲ್ಲೆಯಲ್ಲಿ ಯಾವ ವಿಷಯಗಳಿಗೆ ಆದ್ಯತೆ ನೀಡಬೇಕು ಎಂಬುದನ್ನು ಅಧಿಕಾರಿಗಳೊಂದಿಗೆ ವಿವರವಾಗಿ ಚರ್ಚಿಸಲಿದ್ದೇನೆ. ನನ್ನ ಅವಧಿಯಲ್ಲಿ ಜಿಲ್ಲೆಯಲ್ಲಿ ಗುಣಾತ್ಮಕ ಬದಲಾವಣೆಗೆ ಶ್ರಮಿಸಲಿದ್ದೇನೆ. ಅಧಿಕಾರಿಗಳು ಸ್ಪಂದನಾ ಶೀಲರಾಗಿ ಕೆಲಸ ನಿರ್ವಹಿಸಲು ಸೂಚಿಸುವೆ. ಸಮಸ್ಯೆ ಯಾವ ಹಂತದಲ್ಲಿ ಪರಿಹಾರ ವಾಗಬೇಕಿದೆಯೋ ಅಲ್ಲಿ ಕೂಡಲೇ ಪರಿಹಾರವಾಗಬೇಕು. ಸಾರ್ವಜನಿಕರನ್ನು ಅಲೆದಾಡಿಸುವುದನ್ನು ತಪ್ಪಿಸಬೇಕು. ಈ ನಿಟ್ಟಿನಲ್ಲಿ ಅಗತ್ಯ ನಿರ್ದೇಶನ ನೀಡುವೆ ಎಂದರು.
ಜಿಲ್ಲೆಯಲ್ಲಿ ಆರೋಗ್ಯ, ಶಿಕ್ಷಣ, ಪರಿಶಿಷ್ಟರ ಕಲ್ಯಾಣ, ವಿಶೇಷವಾಗಿ ಹೆಣ್ಣು ಮಕ್ಕಳ ವಿದ್ಯಾಭ್ಯಾಸ, ವಿವಿಧ ಹಂತಗಳಲ್ಲಿ ಮಹಿಳೆಯರ ಸಬಲೀಕರಣ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು. ಜನರಿಗೆ ಅನುಕೂಲವಾಗುವ ಕೆಲಸ ಮಾಡಿಕೊಡುವ ನಿಟ್ಟಿನಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸುತ್ತೇನೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ತಿಳಿಸಿದರು.