ಬೆಂಗಳೂರು,ಮೇ.14- ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ದಾಖಲೆಯೊಂದಿಗೆ ಅಧಿಕಾರಕ್ಕೆ ಬಂದಿದ್ದು ನೂತನ ಮುಖ್ಯಮಂತ್ರಿ ಆಯ್ಕೆಯ ನಿರ್ಧಾರವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಗಲಿಗೆ ವಹಿಸಲಾಗಿದೆ.

ನೂತನವಾಗಿ ಆಯ್ಕೆಯಾದ ಶಾಸಕರು ನೂತನ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯನ್ನು ಪಕ್ಷದ ಹೈಮಾಂಡ್ ನಿರ್ಧಾರ ಕೈಗೊಳ್ಳಲಿ ಎನ್ನುವ ಒಂದು ಸಾಲಿನ ನಿರ್ಣಯವನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಅಂಗೀಕರಿಸಿದ್ದಾರೆ.
ಕೇಂದ್ರದಿಂದ ಆಗಮಿಸಿದ್ದ ವೀಕ್ಷಕರಾದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಸಿಂಧೆ ಸೇರಿದಂತೆ ಕೇಂದ್ರದ ವೀಕ್ಷಕರು, ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸೇರಿದಂತೆ ಹಿರಿಯ ನಾಯಕರಿಂದ ಸಭೆಯಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆಯ ಜವಾಬ್ದಾರಿಯನ್ನ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡುವ ಒಂದು ಸಾಲಿನ ನಿರ್ಣಯ ಕೈಗೊಳ್ಳಲಾಗಿದೆ
ನೂತನ ಶಾಸಕಾಂಗ ಪಕ್ಷದ ನಾಯಕನ ಮೇಲೆ ಹಾಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಣ್ಣಿಟ್ಟಿದ್ದಾರೆ. ಶಾಸಕರು ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಿರ್ಧಾರ ಕೈಗೊಳ್ಳಲಿ ಎನ್ನುವ ಜವಾಬ್ದಾರಿ ನೀಡಿದ್ದಾರೆ

ನಾಳೆ ಸಂಜೆಯೊಳಗೆ ಆಯ್ಕೆ ಸಾಧ್ಯತೆ
ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಗೆ ನೂತನ ಮುಖ್ಯಮಂತ್ರಿ ಆಯ್ಕೆ ಗೆ ಕಸರತ್ತು ನಡೆಸಿದ್ದು ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸಿ ನಾಳೆ ಸಂಜೆಯೊಳಗೆ ನೂತನ ಶಾಸಕಾಂಗ ಪಕ್ಷದ ನಾಯಕರ ಹೆಸರು ಘೋಷಣೆ ಮಾಡುವ ಸಾಧ್ಯತೆಗಳು ದಟ್ಟವಾಗಿದೆ.
ಹಿಮಾಚಲ ಪ್ರದೇಶದಲ್ಲಿರುವ ಸೋನಿಯಾ ಗಾಂಧಿಯವರು ನಾಳೆ ದೆಹಲಿಗೆ ಬರಲಿದ್ದು ಆನಂತರ ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರೊಂದಿಗೆ ಚರ್ಚೆ ನಡೆಸಿ ನೂತನ ಶಾಸಕಾಂಗ ಪಕ್ಷದ ನಾಯಕನ ಹೆಸರು ಪ್ರಕಟ ಮಾಡುವ ಸಾಧ್ಯತೆ ಇದೆ