ನೆಟ್ಟಾರು ಹತ್ಯೆ; ಆರೋಪಿಗಳ ಆಸ್ತಿ ಜಪ್ತಿ

ಮಂಗಳೂರು,ಜು.೩- ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಶರಣಾಗುವಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ನೀಡಿರುವ ಅವಧಿ ಮುಕ್ತಾಯಗೊಂಡಿದೆ.
ಆರೋಪಿಗಳು ನ್ಯಾಯಾಲಯಕ್ಕೆ ಶರಣಾಗದೇ ಇರುವ ಹಿನ್ನಲೆಯಲ್ಲಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ ಎನ್‌ಐಎ ಮುಂದಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ನೀಡಲಾದ ಆಸ್ತಿ ಮುಟ್ಟುಗೋಲು ಎಚ್ಚರಿಕೆಗೂ ಆರೋಪಿಗಳು ಬಗ್ಗದೆ ನಾಪತ್ತೆಯಾಗಿದ್ದು, ಜೂನ್ ೩೦ರೊಳಗೆ ನ್ಯಾಯಾಲಯದ ಮುಂದೆ ಶರಣಾಗಬೇಕು, ಇಲ್ಲವೇ ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಧ್ವನಿವರ್ಧಕದ ಮೂಲಕ ಸುಳ್ಯ, ಬೆಳ್ಳಾರೆ ಪರಿಸರಗಳಲ್ಲಿ ಘೋಷಣೆ ಮಾಡಲಾಗಿತ್ತು. ಆರೋಪಿಗಳ ಮನೆ ಬಾಗಿಲಿಗೆ ಈ ಬಗ್ಗೆ ಭಿತ್ತಿಪತ್ರ ಅಂಟಿಸುವ ಮೂಲಕವೂ ಗಡುವು ನೀಡಲಾಗಿತ್ತು.
ಆದರೂ ಆರೋಪಿಗಳು ಇದುವರೆಗೂ ಶರಣಾಗಿಲ್ಲ. ಹೀಗಾಗಿ ಆಸ್ತಿಗಳನ್ನು ಜಪ್ತಿ ಮಾಡುವುದಕ್ಕೆ ಎನ್‌ಐಎ ಮುಂದಾಗಿದೆ. ಆರೋಪಿಗಳ ಚರಾಸ್ತಿ ಹಾಗೂ ಸ್ಥಿರಾಸ್ತಿಗಳ ಮಾಹಿತಿಯನ್ನು ಎನ್‌ಐಎ ಅಧಿಕಾರಿಗಳು ಕಂದಾಯ ಇಲಾಖೆ, ಬ್ಯಾಂಕ್‌ಗಳು ಮತ್ತಿತರ ಮೂಲಗಳಿಂದ ಸಂಗ್ರಹಿಸುತ್ತಿದ್ದಾರೆ. ಆರೋಪಿಗಳ ಹೆಸರಿನಲ್ಲಿರುವ ಆಸ್ತಿಗಳ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಿದೆ. ನಂತರ ಆರೋಪಿಯದ್ದೇ ಆಸ್ತಿ ಎಂದು ದೃಢೀಕರಣಗೊಂಡಲ್ಲಿ ಮುಟ್ಟುಗೋಲು ಹಾಕಿಕೊಂಡು ಸರಕಾರದ ವಶಕ್ಕೆ ಪಡೆಯಬಹುದು ಎಂದು ಹೇಳಲಾಗುತ್ತಿದೆ.
ಪ್ರಕರಣದ ಹಿನ್ನೆಲೆ:
ಕಳೆದ ವರ್ಷದ ಜುಲೈ ೨೬ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದರು.
ರಾತ್ರಿ ೮ ಗಂಟೆಯ ಸುಮಾರಿಗೆ ಪ್ರವೀಣ್ ಬೈಕ್‌ನಲ್ಲಿ ಮನೆಗೆ ಹೊರಡಲು ಸಿದ್ದರಾಗಿದ್ದಾಗ ಮುಸುಕುಧಾರಿಗಳು ದಾಳಿ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್‌ರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆಯೇ ಮೃತಪಟ್ಟಿದ್ದರು. ಹತ್ಯೆ ಖಂಡಿಸಿ ಹಿಂದೂ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದರು.
ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಆರೋಪಿಗಳ ಪತ್ತೆಗಾಗಿ ಪೊಲೀಸ್ ಇಲಾಖೆ ವಿಶೇಷ ತಂಡಗಳನ್ನು ರಚಿಸಿತ್ತು. ನಂತರ ನಡೆದ ಬೆಳವಣಿಗೆಗಳಲ್ಲಿ ಕೊಲೆಗೆ ಸಹಕಾರ ನೀಡಿದ ಹಲವು ಆರೋಪಿಗಳನ್ನು ಬಂಧಿಸಲಾಗಿತ್ತು.