ನೇಹಾ ಹತ್ಯೆ ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು, ಏ. ೨೨- ಹುಬ್ಬಳ್ಳಿಯಲ್ಲಿ ಸಹಪಾಠಿಯಿಂದಲೇ ಹತ್ಯೆಗೀಡಾದ ನೇಹಾ ಹಿರೇಮಠ್ ಕೊಲೆ ಪ್ರಕರಣ ಖಂಡಿಸಿ ಹಾಗೂ ಕಾಂಗ್ರೆಸ್ ಪಕ್ಷದ ತುಷ್ಠೀಕರಣ ನೀತಿಯನ್ನು ವಿರೋಧಿಸಿ ಬಿಜೆಪಿ ರಾಜ್ಯಾದ್ಯಂತ ಇಂದು ಪ್ರತಿಭಟನೆ ನಡೆಸಿತು.
ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಮಿತಿ ಮೀರಿವೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರು ದೂರಿದರು
ಓಲೈಕೆ ರಾಜಕಾರಣಕ್ಕಾಗಿ ಸಮಾಜಘಾತುಕ ಶಕ್ತಿಗಳ ತೃಷ್ಟೀಕರಣ ಮಾಡುತ್ತಾ ಹಿಂದೂಗಳ ರಕ್ಷಣೆಗೆ ಕಿಂಚಿತ್ತೂ ಕಾಳಜಿ ವಹಿಸದ ಕಾಂಗ್ರೆಸ್ ಪಕ್ಷಕ್ಕೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಬಿಜೆಪಿ ಕರೆ ನೀಡಿದೆ.ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರು ಹಿಂದೂ ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡದ ತೊಘಲಕ್ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆಗಳನ್ನು ಕೂಗಿದರು.ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ನೇಹಾ ಹತ್ಯೆಯನ್ನು ಖಂಡಿಸಿದರು. ಹಾಗೆಯೇ ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲವಾಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.ಮೈಸೂರಿನ ಗಾಂಧಿ ವೃತ್ತದಲ್ಲಿ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ, ಶಾಸಕ ಶ್ರೀವತ್ಸ, ಓಬಿಸಿ ಮೋರ್ಚಾ ಅಧ್ಯಕ್ಷ ಆರ್. ರಘು ಕೌಟಿಲ್ಯ ಸೇರಿದಂತೆ ಹಲವು ಮುಖಂಡರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.ಇಡೀ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಧಾರವಾಡ, ತುಮಕೂರು, ದಾವಣಗೆರೆ, ಹಾವೇರಿ, ಚಿತ್ರದುರ್ಗ, ಬಳ್ಳಾರಿ, ಕಲಬುರಗಿ, ಹುಬ್ಬಳ್ಳಿ-ಧಾರವಾಡ, ಬಾಗಲಕೋಟೆ, ಮಂಡ್ಯ, ರಾಮನಗರ, ಶಿವಮೊಗ್ಗ, ವಿಜಯನಗರ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶವನ್ನು ಹೊರ ಹಾಕಿದರು.ಹುಬ್ಬಳ್ಳಿಯಲ್ಲಿ ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಭಾವಚಿತ್ರ ಸುಟ್ಟು ಆಕ್ರೋಶ ಹೊರ ಹಾಕಿದರು. ಜತೆಗೆ ಟೈರ್‌ಗಳಿಗೂ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.ಸಿದ್ರಾಮುಲ್ಲಾಖಾನ್ ಮತ್ತು ಡಿಕೆಶಿ ಬ್ರದರ್‌ಗೆ ಧಿಕ್ಕಾರ ಎಂಬ ಘೋಷಣೆಗಳನ್ನು ಕೂಗಿ ಹುಬ್ಬಳ್ಳಿಯ ಹಳೆ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.ಹಾಗೆಯೇ ನೇಹಾ ಹತ್ಯೆ ಪ್ರಕರಣದ ಆರೋಪಿ ಫಯಾಸ್ ಅವರ ಭಾವಚಿತ್ರಕ್ಕೂ ಬೆಂಕಿ ಇಟ್ಟು, ಚಪ್ಪಲಿಯಿಂದ ಹೊಡೆದು ಸಿಟ್ಟು ಪ್ರದರ್ಶಿಸಿದರು.ಧಾರವಾಡದ ಅಂಜುಮಾನ್ ಇಸ್ಲಾಂ ಸಂಸ್ಥೆ ನೇಹಾ ಹತ್ಯೆ ಖಂಡಿಸಿ ಕರೆ ನೀಡಿದ್ದ ಬಂದ್‌ಗೂ ಹುಬ್ಬಳ್ಳಿ – ಧಾರವಾಡದಲ್ಲಿ ಉತ್ತಮ ಪ್ರತಿಕ್ರೆಯ ವ್ಯಕ್ತವಾಗಿದ್ದು, ಹಲವೆಡೆ ಮುಸ್ಲಿಂ ಸಮುದಾಯದವರು ಸೇರಿದಂತೆ ಎಲ್ಲರೂ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್‌ಗೆ ಬಂಬಲ ಸೂಚಿಸಿದರು.

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಹಾಗೂ ಹದಗೆಟ್ಟ ಕಾನೂನು ಸುವ್ಯವಸ್ಥೆ ಖಂಡಿಸಿ ಮೈಸೂರಿನಲ್ಲಿಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಶಾಸಕ ಟಿ.ಎಸ್. ಶ್ರೀವತ್ಸ, ಓಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಆರ್. ರಘುಕೌಟಿಲ್ಯ ಮತ್ತಿತರ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.ತುಮಕೂರಿನಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಬಿಜಿಎಸ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.ಬಳ್ಳಾರಿಯಲ್ಲಿ ಮಾಜಿ ಶಾಸಕ ಸೋಮಶೇಖರರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ತಪ್ಪಿತಸ್ಥರ ವಿರುದ್ಧ ಉಗ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.ಬಳ್ಳಾರಿಯ ಕನಕದುರ್ಗಂ ದೇವಸ್ಥಾನದಿಂದಿ ಆರಂಭವಾದ ಪ್ರತಿಭಟನೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅಂತ್ಯಗೊಂಡಿತು.ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.