ನ್ಯಾಯಯುತ ವೇತನ ಪೂರೈಸುವಲ್ಲಿ ಮಾದರಿ ಯಾಗೋಣ


ಧಾರವಾಡ,ಜು.18:ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಕಚೇರಿ ಕೆಲಸಕ್ಕೆ ನೇಮಿಸಿಕೊಳ್ಳುವ ಗುತ್ತಿಗೆ ನೌಕರರಿಗೆ ಸರ್ಕಾರದಿಂದ ನಿರ್ಧರಿತ ನ್ಯಾಯಯುತ ವೇತನ ದೊರೆಯುವಂತೆ ಜವಾಬ್ದಾರಿ ನಿರ್ವಹಿಸಿ, ಸರ್ಕಾರಿ ಇಲಾಖೆಗಳಾದ ನಾವು ಇತರರಿಗೆ ಮಾದರಿ ಆಗೋಣ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕಾರ್ಮಿಕ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ಸರ್ಕಾರದ ವಿವಿಧ ಇಲಾಖೆ, ನಿಗಮ ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ದೊರಕುವ ಶಾಸನಾತ್ಮಕ ಸೌಲಭ್ಯಗಳ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಅರಿವು ಮೂಡಿಸುವ ಜಿಲ್ಲಾಮಟ್ಟದ ಕಾರ್ಯಾಗಾರ ಉದ್ಘಾಟಿಸಿ, ಮಾತನಾಡಿದರು.
ಹೊರಗುತ್ತಿಗೆ ನೌಕರರನ್ನು ನೇಮಿಸಿಕೊಳ್ಳುವ ಪ್ರತಿ ಇಲಾಖೆ ಮುಖ್ಯಸ್ಥರು, ಅಧಿಕಾರಿಗಳು ಅವರಿಗೆ ನ್ಯಾಯಯುತ ವೇತನ ಸಿಗುವ ಖಾತರಿ ಮಾಡಿಕೊಳ್ಳಬೇಕು.
ಮಾನವ ಸಂಪನ್ಮೂಲ ಒದಗಿಸುವ ಏಜೆನ್ಸಿ ಅಥವಾ ಗುತ್ತಿಗೆದಾರ ಪ್ರಚಲಿತ ಜಾರಿಯಲ್ಲಿರುವ ಕಾನೂನುಗಳ ಪಾಲನೆ ಮಾಡುವಂತೆ ನೋಡಿಕೊಳ್ಳಬೇಕು. ಕೌಶಲ್ಯ ಮತ್ತು ಅಕೌಶಲ್ಯಯುತ ಕಾರ್ಮಿಕರಿಗೆ ನೀಡುವ ವೇತನ ಸರಿಯಾಗಿ ಸಿಗುವಂತೆ ಇಲಾಖಾ ಮುಖ್ಯಸ್ಥರು ಜವಾಬ್ದಾರಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ವಲಯವಾರು ಉದ್ದಿಮೆಗಳಿಗೆ ಅಗತ್ಯವಿರುವ ಸಿಬ್ಬಂದಿಗಳಿಗೆ ಪ್ರತ್ಯೇಕವಾದ ವೇತನ ನಿಗದಿ ಆಗಿರುತ್ತದೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಈ ಕುರಿತು ಉದ್ದಿಮೆದಾರರಿಗೆ ಅರಿವು ಮೂಡಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಬಿ.ಎಸ್. ಮೂಗನೂರಮಠ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕಾರ್ಮಿಕ ಇಲಾಖೆ ಬೆಳಗಾವಿ ಪ್ರಾದೇಶಿಕ ವಿಭಾಗದ ಉಪಕಾರ್ಮಿಕ ಆಯುಕ್ತರಾದ ಡಿ.ಜಿ. ನಾಗೇಶ ಅವರು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಹೊರಗುತ್ತಿಗೆ ನೌಕರರಿಗೆ ದೊರಕುವ ಶಾಸನಾತ್ಮಕ ಸೌಲಭ್ಯಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಲಲಿತಾ ಲಮಾಣಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಾಟೀಲ ಶಶಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಕಾರ್ಮಿಕ ಇಲಾಖೆ ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳು, ನಿಗಮ ಮಂಡಳಿಗಳ ಅಧಿಕಾರಿಗಳು ಭಾಗವಹಿಸಿದ್ದರು.