ನ್ಯಾಷನಲ್ ಹೆರಾಲ್ಡ್ ಪ್ರಕರಣ: ಜು21ಕ್ಕೆ ವಿಚಾರಣೆಗೆ ಹಾಜರಾಗಲು ಸೋನಿಯಾಗೆ ಇಡಿ ನೋಟೀಸ್

ನವದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಿಂಗಳ 21 ರಂದು
ವಿಚಾರಣೆಗೆ ಹಾಜರಾಗುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೊಮ್ಮೆ ನೋಟಿಸ್ ಜಾರಿ ಮಾಡಿದೆ .
ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಆದರೆ, ಕೋವಿಡ್ ಹಾಗೂ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಕಾರಣ ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ಮಾಡಿದ್ದಾರೆ. ಹೀಗಾಗಿ ವಿಚಾರಣೆಗೆ ಹಾಜರಾಗಲು ಹೆಚ್ಚಿನ ಸಮಯಾವಕಾಶ ಕೋರಿ ಇಡಿ ಅಧಿಕಾರಿಗಳಿಗೆ ಪತ್ರ ಬರೆದಿದ್ದರು.
ಈ ಮನವಿಗೆ ಸ್ಪಂದಿಸಿದ ಇಡಿ ಅಧಿಕಾರಿಗಳು ಈಗ ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಈ ಹಿಂದೆ ಜೂನ್ 8 ರಂದು ವಿಚಾರಣೆಗಾಗಿ ಇಡಿ ಮುಂದೆ ಹಾಜರಾಗುವಂತೆ ಸೋನಿಯಾ ಅವರಿಗೆ ನೋಟಿಸ್ ನೀಡಿತ್ತು. ಅವರಿಗೆ ಕೋವಿಡ್ ಕಾಣಿಸಿಕೊಂಡಿದ್ದ ಕಾರಣ ಜೂನ್ 23 ರಂದು ಹಾಜರಾಗುವಂತೆ ಹೊಸ ಸಮನ್ಸ್ ನೀಡಿತ್ತು. ಆದರೆ, ಉಸಿರಾಟದ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ, ಹೆಚ್ಚಿನ ಸಮಯವಕಾಶ ಕೇಳಿದ್ದರು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಜೂನ್ 13 ರಿಂದ ಜೂನ್ 21ರ ನಡುವೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಐದು ಬಾರಿ ಪ್ರಶ್ನಿಸಿದೆ. 2012ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಭಾರಿ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಭಾರತೀಯ ಜನತಾ ಪಕ್ಷದ ನಾಯಕ ಸುಬ್ರಮಣ್ಯನ್ ಸ್ವಾಮಿ ದೂರು ದಾಖಲಿಸಿದ್ದರು.