ನ್ಯಾಷನಲ್ ಹೆರಾಲ್ಡ್ ೧೧ ಕಡೆ ಇಡಿ ದಾಳಿ

ನವದೆಹಲಿ, ಆ. ೨- ನ್ಯಾಷನಲ್ ಹೆರಾಲ್ಡ್ ಪತ್ರಿಕೆಯಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆ ಕುರಿತಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಇಂದು ದೆಹಲಿಯ ೧೧ ಕಡೆಗಳಲ್ಲಿ ದಾಳಿ ನಡೆಸಿ ಮಹತ್ವದ ಮಾಹಿತಿ ಸಂಗ್ರಹಿಸಿದೆ.
ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಕ್ಷದ ಅಧಿನಾಯಕಿ ಸೋನಿಯಾಗಾಂಧಿಯವರನ್ನು ವಿಚಾರಣೆ ನಡೆಸಿದ ಬೆನ್ನಲ್ಲೇ ಇಡಿ ಅಧಿಕಾರಿಗಳು ಈ ದಾಳಿ ನಡೆಸಿರುವುದು ಸಂಚಲನ ಸೃಷ್ಠಿಸಿದೆ.ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಕಚೇರಿ ಸೇರಿದಂತೆ ಹಲವೆಡೆ ಇಡಿ ಅಧಿಕಾರಿಗಳು ದಾಳಿ ಮಾಡಿ, ಹಲವು ಕಡತಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇತ್ತೀಚೆಗೆಷ್ಟೇ ಸೋನಿಯಾಗಾಂಧಿಯವರನ್ನು ಹಲವು ತಾಸುಗಳ ಕಾಲ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಿದ್ದರು. ಇದಕ್ಕೂ ಮೊದಲು ಪುತ್ರ ರಾಹುಲ್ ಗಾಂಧಿಯವರನ್ನು ೫೦ ತಾಸುಗಳ ಕಾಲ ವಿಚಾರಣೆಗೆ ಗುರಿಪಡಿಸಿತ್ತು.
ಕಾಂಗ್ರೆಸ್ ನಾಯಕ ಪವನ್ ಬನ್ಸಾಲ್ ಹಾಗೂ ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ವಿಚಾರಣೆಗೆ ಗುರಿಪಡಿಸಲಾಯಿತು.೨೦೧೩ರಲ್ಲಿ ಬಿಜೆಪಿ ಸಂಸದ ಸುಬ್ರಮಣ್ಯ ಸ್ವಾಮಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆ ಕುರಿತು ಖಾಸಗಿ ಕ್ರಿಮಿನಲ್ ದೂರು ದಾಖಲಿಸಿದ್ದರು.