ನ.20 ಪಿಯು ಉಪನ್ಯಾಸಕ‌‌ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲು ತೀರ್ಮಾನ

ಬೆಂಗಳೂರು, ನ 17-ಈಗಾಗಲೇ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಂಡಿರುವ ನೂತನ ಪಿಯು ಉಪನ್ಯಾಸಕ ಅಭ್ಯರ್ಥಿಗಳಿಗೆ ಈ ತಿಂಗಳ
20 ರಿಂದ ನೇಮಕಾತಿ ಆದೇಶ ನೀಡಲು ಸರ್ಕಾರ ತೀರ್ಮಾನಿಸಿದೆ.
ಇಂದು ನಡೆದ ಶಿಕ್ಷಣ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಸು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
,ನವೆಂಬರ್ 20ರಂದು ಮುಖ್ಯಮಂತ್ರಿಗಳು ಸಾಂಕೇತಿಕವಾಗಿ ನೇಮಕಾತಿ ಆದೇಶ ನೀಡಲಿದ್ದಾರೆ. ಕಾಲೇಜುಗಳು ಆರಂಭವಾದ ದಿನದಿಂದ ನೇಮಕಾತಿ ಆದೇಶ ಜಾರಿಗೆ ಬರಲಿದ್ದು, ಅದಕ್ಕೂ ಮೊದಲು ನೂತನ ಉಪನ್ಯಾಸಕರಿಗೆ ಇಲಾಖೆಯ ನಿಯಮಗಳು, ಆಡಳಿತ, ವೃಂದ ಮತ್ತು ನೇಮಕಾತಿ ನಿಯಮಗಳು, ಉಪನ್ಯಾಸಕರ ತರಬೇತಿ ಕಾರ್ಯಾಗಾರವನ್ನು ಜಿಲ್ಲೆಗಳಲ್ಲಿ ಇಲ್ಲವೇ ವಿಭಾಗಗಳಲ್ಲಿ ನೀಡಲಾಗುವುದು ಎಂದು ಹೇಳಿದರು.
ಪಿಯು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ನವೆಂಬರ್ 23ರಿಂದ ಚಾಲನೆ ನೀಡಲಾಗುತ್ತದೆ. ಅಂದಿನಿಂದಲೇ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಬಾರಿ ಉಪನ್ಯಾಸಕರ ಕಡ್ಡಾಯ ಹಾಗೂ ಹೆಚ್ಚುವರಿ ವರ್ಗಾವಣೆ ಇರುವುದಿಲ್ಲ. ಮುಂದಿನ ಅಧಿವೇಶನದಲ್ಲಿ ಪದವಿಪೂರ್ವ ಶಿಕ್ಷಣ ಉಪನ್ಯಾಸಕರ ವರ್ಗಾವಣಾ ನಿಯಂತ್ರಣ ಕಾಯ್ದೆಗೆ ಸಂಪೂರ್ಣ ತಿದ್ದುಪಡಿ ತಂದು, ಉಪನ್ಯಾಸಕ ಸ್ನೇಹಿಯಾದ ವರ್ಗಾವಣಾ ನೀತಿ ಜಾರಿಗೊಳಿಸಲಾಗುವುದು ಎಂದು ಸುರೇಶ್ ಕುಮಾರ್ ವಿವರಿಸಿದರು.