ಪಂಚಮಸಾಲಿ ಮೀಸಲಾತಿಗೆ ಬಿಎಸ್‌ವೈ ವಿರೋಧವಿಲ್ಲ

ಮೈಸೂರು,ಸೆ.೨೧- ಪಂಚಮಸಾಲಿ ಸಮುದಾಯಕ್ಕೆ ೨ಎ ಮಿಸಲಾತಿ ನೀಡುವ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರೋಧ ವ್ಯಕ್ತಪಡಿಸಿಲ್ಲ ಎಂದು ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.
ಮೀಸಲಾತಿ ವಿಚಾರದಲ್ಲಿ ಯಡಿಯೂರಪ್ಪ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದ ಬೆನ್ನಲ್ಲೆ ವಿಜಯೇಂದ್ರ ಈ ಸ್ಪಷ್ಟೀಕರಣ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ವಿಚಾರದಲ್ಲಿ ಯಡಿಯೂರಪ್ಪ ಹಾಗೂ ತಮ್ಮ ಹೆಸರನ್ನು ಎಳೆದು ತರುತ್ತಿದ್ದಾರೆ. ಈ ಮೂಲಕ ಪಂಚಮಸಾಲಿ ಸಮಾಜದ ವಿರೋಧಿ ಎಂದು ಬಿಂಬಿಸುವ ಯತ್ನ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ರಾಜಕೀಯ ಕಾರಣಕ್ಕಾಗಿ ಶ್ರೀಗಳ ಮನಸ್ಸನ್ನು ಯಾರೋ ಕೆಡಿಸಿದ್ದಾರೆ. ಸ್ವಾಮೀಜಿಗಳಿಗೆ ಇಲ್ಲಸಲ್ಲದ ವಿಚಾರಗಳನ್ನು ತುಂಬಿ ದಾರಿ ತಪ್ಪಿಸುತ್ತಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.