ಬೆಂಗಳೂರು,ಮಾ.೨೩:ಲಿಂಗಾಯತ ಪಂಚಮಸಾಲಿ ಸಮುದಾಯದ ೨ಎ ಮೀಸಲಾತಿ ಬೇಡಿಕೆ ಬಗ್ಗೆ ನಾಳೆ ನಡೆಯುವ ಸಚಿವ ಸಂಪುಟದಲ್ಲಿ ಸರ್ಕಾರ ಒಂದು ತೀರ್ಮಾನ ಕೈಗೊಳ್ಳಲಿದೆ. ಈ ಹಿಂದೆ ಒಕ್ಕಲಿಗರಿಗೆ ೨ಸಿ, ಲಿಂಗಾಯತರಿಗೆ ೨ಡಿ ಹೊಸ ಪ್ರವರ್ಗವನ್ನು ಸೃಷ್ಟಿಸಿ ಮೀಸಲಾತಿ ನೀಡಲು ಮುಂದಾಗಿತ್ತು. ಈ ವಿಚಾರ ನ್ಯಾಯಾಲಯದ ಮೆಟ್ಟಿಲೇರಿ ನ್ಯಾಯಾಲಯ ಮೀಸಲಾತಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮಧ್ಯಂತರ ಆದೇಶ ನೀಡಿತ್ತು. ಹಾಗಾಗಿ. ಈ ವಿಚಾರ ನೆನೆಗುದಿಗೆ ಬಿದ್ದಿತ್ತು. ಇಂದು ನ್ಯಾಯಾಲಯ ಮಧ್ಯಂತರ ಆದೇಶ ತೆರವು ಮಾಡಿದ್ದು, ಮೀಸಲಾತಿಗೆ ಇದ್ದ ಅಡೆತಡೆ ನಿವಾರಣೆಯಾದಂತಾಗಿದೆ.
ಇಂದು ನ್ಯಾಯಾಲಯ ಮಧ್ಯಂತರ ಆದೇಶವನ್ನು ತೆರವುಗೊಳಿಸಿ ಸರ್ಕಾರದ ತೀರ್ಮಾನ ಅಂತಿಮ ತೀರ್ಪಿಗೆ ಬದ್ಧವಾಗಿರುತ್ತದೆ ಎಂದು ಹೇಳಿದೆ. ಇದರಿಂದ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಹೊಸದಾಗಿ ಪ್ರವರ್ಗ ಸೃಷ್ಟಿಸಿ ಮೀಸಲಾತಿ ನೀಡಲು ಇದ್ದ ಅಡ್ಡಿ ನಿವಾರಣೆಯಾದಂತಾಗಿದೆ.
ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಲಿಂಗಾಯತ ಪಂಚಮಸಾಲಿ ಸಮುದಾಯದ ೨ಎ ಮೀಸಲಾತಿ ಬೇಡಿಕೆ ಬಗ್ಗೆ ಒಂದು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ವಿಧಾನಸಭಾ ಚುನಾವಣೆಗಳು ಹತ್ತಿರವಾಗುತ್ತಿರುವಾಗ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡದಿದ್ದರೆ ಚುನಾವಣೆಯಲ್ಲಿ ವ್ಯತಿರಿಕ್ತ ಪರಿಣಾಮ ಆಗಬಹುದು ಎಂಬ ಹಿನ್ನೆಲೆಯಲ್ಲಿ ಸರ್ಕಾರ ಲಿಂಗಾಯತ ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ಬಗ್ಗೆ ಒಂದು ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಲಾಗಿದೆ.
ಪಂಚಮಸಾಲಿ ಸಮುದಾಯದ ೨ಎ ಮೀಸಲಾತಿಗೆ ಆಗ್ರಹಿಸಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ದೊಡ್ಡ ಹೋರಾಟವನ್ನೇ ನಡೆಸಿ ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಅನಿರ್ದಿಷ್ಟ ಧರಣಿಯನ್ನು ನಡೆಸಿದ್ದರು.
ನಾಳೆ ಸಿಹಿ ಸುದ್ದಿ.ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠಾಧಿಪತಿ ವಚನಾನಂದಸ್ವಾಮೀಜಿ ನಾಳೆ ಪಂಚಮಸಾಲಿ ಸಮುದಾಯಕ್ಕೆ ಸರ್ಕಾರದಿಂದ ಅತ್ಯುತ್ತಮ ಕೊಡುಗೆ ಸಿಗುವ ವಿಶ್ವಾಸವಿದೆ ಎಂದು ಬೆಂಗಳೂರಿನಲ್ಲಿ ಹೇಳಿದ್ದಾರೆ.