ಪಂಚ ರಾಜ್ಯ ಚುನಾವಣೆಯತ್ತ ಬಿಜೆಪಿ ಚಿತ್ತ

ನವದೆಹಲಿ,ನ.೭- ಮುಂದಿನ ವರ್ಷ ನಡೆಯಲಿರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯತ್ತ ಬಿಜೆಪಿ ಗಮನ ಕೇಂದ್ರೀಕರಿಸಿದ್ದು, ಇಂದು ಪಂಚ ರಾಜ್ಯಗಳ ಚುನಾವಣೆಯ ರಣ ನೀತಿಗಳ ಬಗ್ಗೆ ದೆಹಲಿಯಲ್ಲಿ ನಡೆದಿರುವ ಮಹತ್ವದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚಿಸಲಾಯಿತು.
ಮುಂಬರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಗೆಲುವಿನ ರಣತಂತ್ರಗಳ ಬಗ್ಗೆ ಚರ್ಚಿಸಿ ಚುನಾವಣಾ ರಣ ನೀತಿಗಳನ್ನು ಅಂತಿಮಗೊಳಿಸುವ ಈ ಸಭೆಗೆ ಪ್ರಧಾನಿ ನರೇಂದ್ರಮೋದಿ ಚಾಲನೆ ನೀಡಿದರು.
ದೇಶದ ೧೩ ರಾಜ್ಯಗಳ ವಿಧಾನಸಭೆ ಮತ್ತು ಲೋಕಸಭಾ ಉಪ ಚುನಾವಣೆಯಲ್ಲಿ ಮಿಶ್ರಫಲ ಅನುಭವಿಸಿರುವ ಬಿಜೆಪಿ, ಈಗ ಪಂಚ ರಾಜ್ಯಗಳ ಚುನಾವಣೆಯತ್ತ ಚಿತ್ತ ಹರಿಸಿದೆ. ಮುಂಬರುವ ಡಿಸೆಂಬರ್ ಹೊತ್ತಿಗೆ ಪ್ರತೀ ಬೂತ್ ಮಟ್ಟದ ಘಟಕಗಳ ರಚನೆಯನ್ನು ಸಂಪೂರ್ಣಗೊಳಿಸುವ ತೀರ್ಮಾನವನ್ನು ಸಭೆಯಲ್ಲಿ ಮಾಡಲಾಗಿದೆ.
ಇದರ ಜತೆಗೆ ಮನೆ ಮನೆಗೂ ಪ್ರಧಾನಿ ನರೇಂದ್ರಮೋದಿ ಅವರ ಮನ್ ಕಿ ಬಾತ್ ಮುಟ್ಟಿಸುವ ಜತೆಗೆ ಕೇಂದ್ರ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳು ಜಾರಿ ಮಾಡಿರುವ ಜನಪರ ಯೋಜನೆಗಳನ್ನು ಮನೆ ಮನೆಗೆ ತಲುಪಿಸಲು ವಿಶೇಷ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆಯೂ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಕೊರೊನಾ ಸೋಂಕನ್ನು ತಡೆಗಟ್ಟಲು ಕೋವಿಡ್ ಲಸಿಕೆ ನೀಡುವ ವೇಗವನ್ನು ಮತ್ತಷ್ಟು ಹೆಚ್ಚಳ ಮಾಡುವ ಬಗ್ಗೆಯೂ ಸಭೆಯಲ್ಲಿ ನಿರ್ಣಯವನ್ನು ಕೈಗೊಳ್ಳಲಾಗಿದೆ.
ಕಾರ್ಯಕಾರಿಣಿ ಸಮಿತಿಯ ತೀರ್ಮಾನಗಳ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಸಂಘಟನೆಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆಗಳನ್ನು ನಡೆಸಲಾಗಿದೆ. ಹಾಗೆಯೇ ಮುಂಬರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಸಿದ್ಧತೆಗಳ ಬಗ್ಗೆಯೂ ಚರ್ಚೆಗಳು ನಡೆದವು ಎಂದರು.
ಈ ಕಾರ್ಯಕಾರಿಣಿ ಸಭೆಯಲ್ಲಿ ೩೪೨ ಮಂದಿ ಪಾಲ್ಗೊಂಡಿದ್ದು, ಹಿರಿಯ ನಾಯಕರಾದ ಎಲ್.ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರು ವರ್ಚುವಲ್ ಮೂಲಕ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಅವರು ಹೇಳಿದರು.
ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅಧ್ಯಕ್ಷತೆಯಲ್ಲಿ ನಡೆದಿರುವ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ೧೩ ರಾಜ್ಯಗಳ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳ ಫಲಿತಾಂಶದ ಪರಾಮರ್ಶೆ ದೇಶದ ಮುಂದಿರುವ ಸವಾಲುಗಳು, ಪ್ರಸಕ್ತ ರಾಜಕೀಯ ಬೆಳವಣಿಗೆಗಳು, ಸಂಘಟನಾತ್ಮಕ ಬೆಳವಣಿಗೆ ಕಾರ್ಯ ಯೋಜನೆ, ಪ್ರ ಶಿಕ್ಷ ವರ್ಗ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.
ಪ್ರಧಾನಿ ನರೇಂದ್ರಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲೇ ನಡೆದ ಈ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ಆಳ್ವಿಕೆಯ ರಾಜ್ಯಗಳ ಮುಖ್ಯಮಂತ್ರಿಗಳು, ಎಲ್ಲ ರಾಜ್ಯಗಳ ಬಿಜೆಪಿ ರಾಜ್ಯಾಧ್ಯಕ್ಷರುಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯಕಾರಿಣಿಯ ಸದಸ್ಯರುಗಳು ಹಾಗೂ ವಿಶೇಷ ಆಹ್ವಾನಿತರು ಪಾಲ್ಗೊಂಡಿದ್ದರು.
ರಾಜ್ಯ ನಾಯಕರೂ ಭಾಗಿ
ಇಂದಿನ ಸಭೆಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಸಚಿವರುಗಳಾದ ಕೆ.ಎಸ್ ಈಶ್ವರಪ್ಪ, ಡಾ. ಸಿ.ಎನ್ ಅಶ್ವತ್ಥ ನಾರಾಯಣ, ಆರ್. ಆಶೋಕ್, ಕೋಟಾ ಶ್ರೀನಿವಾಸ ಪೂಜಾರಿ, ಗೋವಿಂದ ಕಾರಜೋಳ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಂಸದ ಅರವಿಂದ ಯಾಧವ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಇವರುಗಳು ವರ್ಚುವಲ್ ಮೂಲಕ ಸಭೆಯಲ್ಲಿ ಪಾಲ್ಗೊಂಡರು.
ಸಭೆಯ ಆರಂಭದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ದಿಕ್ಸೂಚಿ ಭಾಷಣ ಮಾಡಿದರು. ರಾಷ್ಟ್ರೀಯ ಕಾರ್ಯಕಾರಿಣಿ ಪ್ರತಿ ೩ ತಿಂಗಳಿಗೊಮ್ಮೆ ಈ ಹಿಂದೆ ನಡೆಯುತ್ತಿತ್ತು, ಕೊರೊನಾ ಕಾರಣದಿಂದ ಕಳೆದ ೨ ವರ್ಷಗಳಿಂದ ರಾಷ್ಟ್ರೀಯ ಕಾರ್ಯಕಾರಿಣಿ ನಡೆದಿರಲಿಲ್ಲ. ೨ ವರ್ಷದ ನಂತರ ಮೊದಲ ಬಾರಿಗೆ ಕಾರ್ಯಕಾರಿಣಿ ನಡೆದಿದೆ.
ಇಂದಿನ ಈ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ೫ ತಾಸುಗಳ ಕಾಲ ನಡೆಯಲಿದ್ದು, ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರ ಸಮಾರೋಪ ಭಾಷಣದ ನಂತರ ಸಭೆ ಸಮಾಪ್ತಿಯಾಗಲಿದೆ.