ಪಂಜಿನ ಮೆರವಣಿಗೆ ಮೂಲಕ ಮತದಾನ ಜಾಗೃತಿ


ಬಳ್ಳಾರಿ,ಏ.12: ಸಾರ್ವತ್ರಿಕ ವಿಧಾನಸಭಾ ಚುನಾವಣೆ 2023 ಅಂಗವಾಗಿ 93-ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರೂಪನಗುಡಿಯ ಗ್ರಾಮದಲ್ಲಿ ಪ್ರತಿಯೊಬ್ಬರೂ ನಿರ್ಭೀತರಾಗಿ ಮತದಾನ ಮಾಡುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಸೋಮವಾರ ಪಂಜಿನ ಮೆರವಣಿಗೆ ನಡೆಸಲಾಗಿತ್ತು.
ಚುನಾವಣೆ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಮತ್ತು ತಾಲೂಕು ಪಂಚಾಯಿತಿಯಿಂದ ಹಮ್ಮಿಕೊಂಡಿದ್ದ ಪಂಜಿನ ಮೆರವಣಿಗೆಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಐ.ಬಾರೀಕಾರ್ ಅವರು ರೂಪನಗುಡಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಚಾಲನೆ ನೀಡಿದರು.
ಪಂಜಿನ ಮೆರವಣಿಗೆಯು ಗ್ರಾಮ ಪಂಚಾಯಿತಿ ಆವರಣದಿಂದ ಆರಂಭವಾಗಿ ಮಸೀದಿ ವೃತ್ತ, ತೇರು ಬೀದಿ ಮೂಲಕ ರಾಯಪುರ ರಸ್ತೆ ಬಸ್ ನಿಲ್ದಾಣದವರೆಗೆ ಸಾಗಿ ಮುಕ್ತಾಯಗೊಂಡಿತು.
ಪ್ರತಿಜ್ಞಾ ವಿಧಿ ಸ್ವೀಕಾರ: ಮೇ 10 ರಂದು ನಡೆಯಲಿರುವ ಚುನಾವಣೆಯಲ್ಲಿ ಎಲ್ಲಾರೂ ಕಡ್ಡಾಯವಾಗಿ ಮತದಾನ ಮಾಡುವ ಕುರಿತಾದ ಮತದಾನ ಪ್ರತಿಜ್ಞಾ ವಿಧಿಯನ್ನು ಮೆರವಣಿಗೆಯಲ್ಲಿ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ರೂಪನಗುಡಿ ಗ್ರಾಮದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಅಮರಶೆಟ್ಟಿ ಸೇರಿದಂತೆ ತಾಲ್ಲೂಕು ಪಂಚಾಯತ್ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಸ್ವ-ಸಹಾಯ ಸಂಘದ ಪದಾಧಿಕಾರಿಗಳು ಸೇರಿದಂತೆ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.