ಪಕ್ಷವಿರೋಧಿ ಚಟುವಟಕೆ ಹಿನ್ನೆಲೆ: ರಾಜೇಶ್‌ ಕಾಂಗ್ರೆಸ್‌ನಿಂದ ಉಚ್ಛಾಟನೆ

ಮಂಗಳೂರು, ಎ.೨೫- ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪದಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಮಾಣಿಲ ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಮಾಜಿ ಅಧ್ಯಕ್ಷ ಹಾಗೂ ಹಾಲಿ ಉಪಾಧ್ಯಕ್ಷ ರಾಜೇಶ್ ಕುಮಾರ್ ಬಾಳೆಕಲ್ಲು ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.

ರಾಜೇಶ ಬಾಳೆಕಲ್ಲು ಕಳೆದ ಕೆಲವು ಸಮಯಗಳಿಂದ ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಾ ಬಂದಿದ್ದರು ಎನ್ನುವ ಆರೋಪವಿದೆ. ಬ್ಲಾಕ್ ಕಾಂಗ್ರೆಸ್ ಸಮಿತಿ ವಿಟ್ಲ ಹಾಗೂ ಕಾರ್ಯಕರ್ತರು ದೂರಿಕೊಂಡಿದ್ದರು. ಇತ್ತೀಚಿಗೆ ನಡೆದ ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಪ್ರಚಾರ ಮಾಡಿದ್ದರು. ಹಾಗೂ ಪಕ್ಷದ ನಾಯಕರನ್ನು ಅವಹೇಳನಕಾರಿಯಾಗಿ ನಿಂದಿಸಿದ್ದರು. ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಈ ವಿಚಾರವಾಗಿ ಪರಿಶೀಲಿಸಲಾಗಿದೆ. ಈ ವೇಳೆ ಬ್ಲಾಕ್ ಕಾಂಗ್ರೆಸ್ ದೂರಿನಲ್ಲಿ ಸತ್ಯಾಸತ್ಯತೆ ಇರುವುದು ತಿಳಿದುಬಂದಿದೆ. ಈ ಕಾರಣದಿಂದಾಗಿ ಪಕ್ಷ ವಿರೋಧಿ ಚಟುವಟಿಕೆ ಮಾಡಿರುವುದು ಸಾಬೀತಾಗಿದೆ. ಈ ಹಿನ್ನೆಲೆ ರಾಜೇಶ ಬಾಳೆಕಲ್ಲು ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ತಿಳಿಸಿದ್ದಾರೆ.