ಪತ್ರಕರ್ತರ ಭವನ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ : ಲಕ್ಷ್ಮಣ ಸವದಿ

ಅಥಣಿ : ಜೂ.7:ಪಟ್ಟಣದಲ್ಲಿ ಪತ್ರಕರ್ತರ ಭವನ ನಿರ್ಮಿಸಲು ಪುರಸಭೆ ವ್ಯಾಪ್ತಿಯಲ್ಲಿ ಸ್ಥಳಾವಕಾಶದ ಕೊರತೆ ಇದ್ದು, ಸಂಕೋನಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಥಳ ಗುರುತಿಸಿ, ಸರ್ಕಾರದ ಅನುದಾನದಲ್ಲಿ ವ್ಯವಸ್ಥಿತವಾದ ಪತ್ರಕರ್ತರ ಭವನವನ್ನು ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಅವರು ಅಥಣಿ ಪಟ್ಟಣದಲ್ಲಿ ಮಂಗಳವಾರ ಪತ್ರಕರ್ತರಿಂದ ಅಭಿನಂದನಾ ಸನ್ಮಾನ ಸ್ವೀಕರಿಸಿ ಮಾತನಾಡಿ ಪತ್ರಕರ್ತರು ಜನತೆಯ ಧ್ವನಿಯಾಗಿ ಜ್ವಲಂತ ಸಮಸ್ಯೆಗಳ ಬಗ್ಗೆ ವಸ್ತುನಿಷ್ಠ ವರದಿಗಳನ್ನು ನೀಡುವ ಮೂಲಕ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡುತ್ತಿದ್ದಾರೆ. ಕಾಯಾರ್ಂಗ, ಶಾಸಕಾಂಗ, ನ್ಯಾಯಾಂಗ ಮತ್ತು ಪತ್ರಿಕಾರಂಗವು ತಮ್ಮ ತಮ್ಮ ಜವಾಬ್ದಾರಿಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಿದಾಗ ಆಡಳಿತದಲ್ಲಿ ವಿಶೇಷ ಸುಧಾರಣೆ ತರಲು ಸಾಧ್ಯವಾಗುತ್ತದೆ ಎಂದರು.
ಅಥಣಿ ಮತಕ್ಷೇತ್ರದ ಮತದಾರರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನ್ನ ಮೇಲೆ ಅಪಾರ ನಿರೀಕ್ಷೆಗಳನ್ನು ಇಟ್ಟುಕೊಂಡು ನನಗೆ ನಿರೀಕ್ಷೆ ಮೀರಿ ಮತಗಳನ್ನು ನೀಡಿದ್ದಾರೆ. ಹೆಚ್ಚು ಮತಗಳ ಬಂದಿರುವುದು ಕೂಡ ನನ್ನ ಜವಾಬ್ದಾರಿ ಹೆಚ್ಚಾಗಿದೆ. ಜನರ ಅಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತೇನೆ. ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ನನಗೆ ಅಭಿನಂದನಾ ನೆಪದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಆಯೋಜಿಸಿರುವುದು ಅತ್ಯಂತ ಅರ್ಥಪೂರ್ಣ ಕಾರ್ಯಕ್ರಮವಾಗಿದೆ. ವಿದ್ಯಾರ್ಥಿಗಳಲ್ಲಿಯೂ ಕೂಡ ಸಾಮಾಜಿಕ ಕಳಕಳಿ ಇರುವುದು ನನಗೆ ಬಹಳ ಖುಷಿ ತಂದಿದೆ. ನನ್ನ ವಿದ್ಯಾರ್ಥಿ ಜೀವನದಲ್ಲಿ ಯಾವುದೇ ಜನಪ್ರತಿನಿಧಿಗೆ ಪ್ರಶ್ನೆ ಕೇಳುವ ಅವಕಾಶ ದೊರಕಿರಲಿಲ್ಲ. ಇಂದು ಅನೇಕ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶೈಕ್ಷಣಿಕ ಸುಧಾರಣೆಯ ಜೊತೆಗೆ ತಾಲೂಕಿನ ಅಭಿವೃದ್ಧಿಗೆ ಪೂರಕವಾದ ಅನೇಕ ಪ್ರಶ್ನೆಗಳನ್ನು ಕೇಳುವ ಮೂಲಕ ತಮ್ಮ ಸಾಮಾಜಿಕ ಕಳಕಳಿ ವ್ಯಕ್ತಪಡಿಸಿದ್ದು ನನಗೆ ಖುಷಿ ತಂದಿತು ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಣ್ಣಾಸಾಬ ತೆಲಸಂಗ ವಹಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಪ್ರಸಕ್ತ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತಾಲೂಕ ಮಟ್ಟಕ್ಕೆ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ಬಹುಮಾನ ವಿತರಿಸಲಾಯಿತು. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಣ್ಯರಿಗೆ ಸಸಿಗಳನ್ನು ವಿತರಿಸಲಾಯಿತು.
ಹಿರಿಯ ಪತ್ರಕರ್ತ ಸಿ ಎ ಇಟ್ನಾಳಮಠ ಪ್ರಸ್ತಾಪಿಕವಾಗಿ ಮಾತನಾಡಿದರು. ಈ ವೇಳೆ ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿ ನಿರ್ದೇಶಕ ಶಂಭು ಮಮದಾಪುರ, ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಬಿ. ಎಸ್. ಕಾಂಬಳೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.