ಪರಂ ವಿರುದ್ಧ ಅಶೋಕ್ ಕಿಡಿ


ಬೆಂಗಳೂರು, ಏ. ೧೯- ಹುಬ್ಬಳ್ಳಿಯಲ್ಲಿ ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿಕೆಗೆ ಕಿಡಿಕಾರಿರುವ ವಿಪಕ್ಷ ನಾಯಕ ಆರ್. ಅಶೋಕ್, ಇದು ಪ್ರೇಮ ಪ್ರಕರಣ ಎಂದು ಗೃಹ ಸಚಿವರು ಹತ್ಯೆಯಾದ ಯುವತಿಯ ಕುಟುಂಬಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹತ್ಯೆಯಾದ ಹುಡುಗಿಯ ತಾಯಿ ಇದು ಲವ್ ಕೇಸ್ ಅಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ನ ಕಾರ್ಪೋರೇಟರ್ ಸಹ ಲವ್ ಜಿಹಾದ್ ಎಂದಿದ್ದಾರೆ. ಹೀಗಿದ್ದರೂ ಲವ್ ಕೇಸ್ ಎಂದು ಕುಟುಂಬಕ್ಕೆ ಅವಮಾನ ಮಾಡುತ್ತಿದ್ದಾರೆ ಎಂದು ಆರ್. ಅಶೋಕ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ಈ ರೀತಿ ಆಗಿರುವುದರಿಂದ ಆರೋಪಿಗಳನ್ನು ರಕ್ಷಿಸುವ ಕೆಲಸ ನಡೆದಿದೆ. ರಾಜ್ಯದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ ಎಂದು ಟೀಕಿಸಿದರು.
ಲವ್ ಜಿಹಾದ್ ಮಾಡುವವರಿಗೆ ಪಾಸ್‌ಪೋರ್ಟ್, ಗಲಭೆ ಮಾಡುವವರಿಗೆ ವೀಸಾ ಕೊಟ್ಟಿದ್ದಾರೆ. ಇದೊಂದು ನಾಚಿಕೆಗೇಡಿನ ಸರ್ಕಾರ ಎಂದು ಹರಿಹಾಯ್ದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ಕಾಂಗ್ರೆಸ್ ಸರ್ಕಾರದಿಂದ ಆಗುತ್ತಿಲ್ಲ ಎಂದು ಟೀಕಿಸಿದರು.
ಈ ಸರ್ಕಾರ ರಾಜ್ಯದ ಜನರ ರಕ್ಷಣೆ ಮಾಡಲು ಆಗುತ್ತಿಲ್ಲ ಎಂದು ಟೀಕಿಸಿದರು.
ಆರೋಪ ಪಟ್ಟಿ ಬಿಡುಗಡೆ
ಇದೇ ಸಂದರ್ಭದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆರೋಪ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಉದಯ್ ಗರುಡಾಚಾರ್, ಮುನಿರಾಜು ಉಪಸ್ಥಿತರಿದ್ದರು.