ಪರಿಷತ್ ಚುನಾವಣೆ: ಕಲಬುರಗಿಗೆ ನ.20ರಂದು ಬಿಜೆಪಿ ಜನಸ್ವರಾಜ್ ಯಾತ್ರೆ

ಕಲಬುರಗಿ,ನ.18: ಡಿಸೆಂಬರ್ 10ರಂದು ಜರುಗಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷವು ಆರಂಭಿಸಿರುವ ಜನಸ್ವರಾಜ್ ಯಾತ್ರೆಯು ನಗರಕ್ಕೆ ನವೆಂಬರ್ 20ರಂದು ಆಗಮಿಸಲಿದೆ ಎಂದು ಬಿಜೆಪಿಯ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ್ ಪಾಟೀಲ್ ರದ್ದೆವಾಡಗಿ ಅವರು ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲಲು ಪ್ರಚಾರಕ್ಕಾಗಿ ನಾಲ್ಕು ತಂಡಗಳನ್ನಾಗಿ ಮಾಡಲಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನಕುಮಾರ್ ಕಟೀಲ್ ಅವರ ನೇತೃತ್ವದ ತಂಡವು ವಿಭಾಗದಲ್ಲಿ ಸಂಚರಿಸಲಿದ್ದು, ನಗರಕ್ಕೆ ನವೆಂಬರ್ 20ರಂದು ಆಗಮಿಸುತ್ತದೆ ಎಂದರು.
ನಗರದ ಕರುಣೇಶ್ವರ್ ನಗರದ ಬಳಿ ಇರುವ ಕೆಇಬಿ ಕಲ್ಯಾಣ ಮಂಟಪದಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ಬೃಹತ್ ಸಮಾವೇಶ ಜರುಗಲಿದೆ. ಕಟೀಲ್ ಅವರೊಂದಿಗೆ ಕೇಂದ್ರದ ನವೀಕರಿಸಬಹುದಾದ ಇಂಧನ ಮೂಲಗಳು ಹಾಗೂ ರಾಸಾಯನಿಕ ಮತ್ತು ರಸಗೊಬ್ಬರಗಳ ಖಾತೆ ರಾಜ್ಯ ಸಚಿವ ಭಗವಂತ್ ಖೂಬಾ, ವಸತಿ ಸಚಿವ ವಿ. ಸೋಮಣ್ಣ, ರಾಜ್ಯದ ಗೃಹ ಸಚಿವ ಅರಗ ಜ್ಞಾನೇಂದ್ರ, ಬೃಹತ್ ಕೈಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ಆರ್. ನಿರಾಣಿ, ಬಿಜೆಪಿ ಉಪಾಧ್ಯಕ್ಷರು ಮತ್ತು ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್, ಶಾಸಕರಾದ ರಾಜುಗೌಡ, ಎನ್. ಮಹೇಶ್, ಮೈಸೂರು ಸಂಸದ ಪ್ರತಾಪಸಿಂಹ ಹಾಗೂ ಜಿಲ್ಲೆಯ ಸಂಸದರು ಹಾಗೂ ಶಾಸಕರು, ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ಮುಖಂಡರು ಉಪಸ್ಥಿತರಿರುವರು ಎಂದು ಅವರು ಹೇಳಿದರು.
ಸಮಾವೇಶದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಪುರಸಭೆ, ಪಟ್ಟಣ ಪಂಚಾಯಿತಿ, ನಗರಸಭೆ ಹಾಗೂ ಮಹಾನಗರ ಪಾಲಿಕೆಯ ಸದಸ್ಯರೂ ಸೇರಿದಂತೆ ಸುಮಾರು ಹತ್ತು ಸಾವಿರ ಜನರು ಸೇರುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ್, ಮಾಧ್ಯಮ ವಕ್ತಾರ ಅರುಣ್ ಕುಲಕರ್ಣಿ, ಸಂತೋಷ್ ಹಾದಿಮನಿ ಮುಂತಾದವರು ಉಪಸ್ಥಿತರಿದ್ದರು.