ಪರಿಸರ ಮಾಲಿನ್ಯ ನಿಯಂತ್ರಣದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ

ಮಂಡ್ಯ.ಜೂ.04:- ಪರಿಸರ ಮಾಲಿನ್ಯ ನಿಯಂತ್ರಣದ ಬಗ್ಗೆ ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವುದು ಅತ್ಯವಶ್ಯಕ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಉದಯಕುಮಾರ್ ಅವರು ತಿಳಿಸಿದರು.
ಅವರು ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ ಕಾವೇರಿ ಉದ್ಯಾನವನದಲ್ಲಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪರಿಸರ ರೂರಲ್ ಡೆವಲಪ್ ಮೆಂಟ್ ಸೊಸೈಟಿ ಮಂಗಲ ಇವರ ಸಹಕಾರದೊಂದಿಗೆ ವಿಶ್ವ ಪರಿಸರ ದಿನ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು. ಪರಿಸರ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಹೊಣೆ ಎಂದರು.
ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್ ಮಾತನಾಡಿ ಜೂ.5 ರಂದು ಮೈಷುಗರ್ ಆವರಣದಲ್ಲಿ ಸಸ್ಯೋತ್ಸವ ಹಾಗೂ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಪ್ಲಾಸ್ಟಿಕ್ ಮಾಲಿನ್ಯ ಸೋಲಿಸಿ ಎಂಬುದರ ಬಗ್ಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿದ್ದು ಉತ್ತಮವಾದ ಚಿತ್ರ ಮೂಡಿ ಬರಲಿ ಎಂದರು.
ಪರಿಸರ ರಕ್ಷಣೆ ಅಂಗವಾಗಿ ವಿದ್ಯಾರ್ಥಿಗಳು ತಮ್ಮ ಮನೆ, ಶಾಲಾ,ಕಾಲೇಜಿನ ಸುತ್ತಮುತ್ತ ಇರುವ ಖಾಲಿ ಸ್ಥಳಗಳಲ್ಲಿ ಹೊಲಗದ್ದೆಗಳಲ್ಲಿ ಗಿಡ ನೆಡುವ ಮೂಲಕ ಪರಿಸರ ರಕ್ಷಣೆಗೆ ಮುಂದಾಗಿ ಎಂದು ಹೇಳಿದರು.
ಜಿಲ್ಲಾ ಪರಿಸರ ಅಧಿಕಾರಿ ಬಿ.ಪಿ. ಗೀತಾ ಅವರು ಪರಿಸರ ಸಂರಕ್ಷಣೆ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಪರಿಸರ ರೂರಲ್ ಡೆವಲಪ್ ಮೆಂಟ್ ಸೊಸೈಟಿ ಅಧ್ಯಕ್ಷ ಮಂಗಲ ಎಂ. ಯೋಗೇಶ್, ಉಪ ಪರಿಸರ ಅಧಿಕಾರಿಗಳಾದ ಭವ್ಯ,ಅಶ್ವಿನಿ, ಶಿಕ್ಷಣ ಸಂಯೋಜಕ ಬಿ.ಎಲ್. ಮಧುಸೂದನ್, ಜಾನಪದ ಗಾಯಕ ಸಂತೆಕಸಲಗೆರೆ ಬಸವರಾಜು, ಪ್ರೌಢಶಾಲಾ ಶಿಕ್ಷಕರಾದ ಶಿವಕುಮಾರ್, ಮಹಾಂತದೇವರು ಹಾಗೂ ಶಿಕ್ಷಕ ವೃಂದ ಹಾಜರಿದ್ದರು.