ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ

ಮಂಗಳೂರು, ಜೂ.೬- ರಾಜ್ಯ ಸರಕಾರ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅರಣ್ಯ ಇಲಾಖೆ, ಜಿಪಂ, ಜಿಲ್ಲಾಡಳಿತ ಸಹಿತ ಇತರ ಇಲಾಖೆಗಳು ಸಹಭಾಗಿತ್ವದಲ್ಲಿ ರಾಜ್ಯಾದ್ಯಂತ ೧.೭೦ ಕೋಟಿಗೂ ಅಧಿಕ ಗಿಡ-ಮರಗಳನ್ನು ಬೆಳೆಸಲು ಮುಂದಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರಿನಿವಾಸ ಪೂಜಾರಿ ಹೇಳಿದರು.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದ.ಕ.ಜಿಪಂ ಕಚೇರಿಯ ಆವರಣದಲ್ಲಿ ಶನಿವಾರ ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಗಾಂಧೀಜಿ ನುಡಿದಂತೆ ಹಿಂದಿನವರು ನಮಗೆ ಬಿಟ್ಟುಕೊಟ್ಟು ಹೋದ ನೆಲ, ಜಲ, ಪರಿಸರವು ನಮ್ಮದಲ್ಲ. ಅದನ್ನು ಮುಂದಿನ ಜನಾಂಗಕ್ಕೆ ಕೊಡುಗೆಯಾಗಿ ನೀಡಬೇಕು. ಪರಿಸರ ಸಮಾಜದ ಆಸ್ತಿ. ಅದನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಮುಂದಿನ ಪೀಳಿಗೆಗಾಗಿ ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಸಚಿವ ಕೋಟ ಹೇಳಿದರು. ಪ್ರತಿಯೊಬ್ಬರಿಗೂ ಉತ್ತಮ ಆಮ್ಲಜನಕವನ್ನು ಒದಗಿಸುವ ಉದ್ಧೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪರಿಸರವನ್ನು ನಿರ್ಲಕ್ಷಿಸಿ ದ್ದರಿಂದ ಅನೇಕ ಅನಾಹುತಗಳು ಆಗಿರುವುದನ್ನು ನಾವು ಕಂಡಿದ್ದೇವೆ. ಮುಂದೆ ಹೀಗಾಗದಂತೆ ಎಚ್ಚರ ವಹಿಸಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಡಾ.ಕುಮಾರ್, ಜಿಪಂ ಉಪಕಾರ್ಯದರ್ಶಿ ಆನಂದ್ ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಸ್ವಾಮಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.