ಪರಿಹಾರ ವಿತರಣೆಗೆ ಕೂಡಲೆ ಕ್ರಮ ಜರುಗಿಸಿ: ಜಿಲ್ಲಾಧಿಕಾರಿ

ಗದಗ,ನ.20: ಜಿಲ್ಲೆಯಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಬೆಳೆ ಹಾಗೂ ಮನೆಗಳಿಗೆ ಪರಿಹಾರ ವಿತರಣೆಗೆ ಶೀಘ್ರವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ ವೀಡಿಯೋ ಸಂವಾದ ಸಭಾಂಗಣದಲ್ಲಿ ಜರುಗಿದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆಯಿಂದಾಗಿ ಹಾನಿಗೊಳಗಾದ ಮನೆಗಳ ಸಮೀಕ್ಷಣಾ ವರದಿಯನ್ನು ತಂತ್ರಾಂಶದಲ್ಲಿ ದಾಖಲಿಸಲು ನವೆಂಬರ 30ರ ವರೆಗೂ ಅವಧಿ ವಿಸ್ತರಿಸಲಾಗಿದೆ. ಜಿಲ್ಲೆಯಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಿ ನಿಗದಿತ ಅವಧಿಯೊಳಗೆ ದಾಖಲಿಸಲು ಕ್ರಮ ವಹಿಸಬೇಕು. ಈ ಕಾರ್ಯದಲ್ಲಿ ಕಂದಾಯ, ಪಂಚಾಯತರಾಜ್ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆ ಅಧಿಕಾರಿ, ಸಿಬ್ಬಂದಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಖುದ್ದಾಗಿ ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಸಮೀಕ್ಷೆ ಕಾರ್ಯಕ್ಕೆ ಮುಂದಾಗಿ ಮಳೆಯಿಂದಾಗಿ ಹಾನಿಗೊಳಗಾದ ಪ್ರತಿ ಮನೆಯ ವರದಿ ಪಡೆದು ತಂತ್ರಾಂಶದಲ್ಲಿ ದಾಖಲಿಸಬೇಕು. ಅದೇ ರೀತಿ ಮಳೆಯಿಂದಾಗಿ ಹಾನಿಗೊಳಗಾದ ಬೆಳೆ ಹಾನಿ ವರದಿಯನ್ನು ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಮನ್ವಯದೊಂದಿಗೆ ಬೆಳೆ ಹಾನಿ ಸಮೀಕ್ಷೆ ಜರುಗಿಸಿ ವರದಿ ನೀಡಿ ಶೀಘ್ರವೇ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ ಎಂ. ಮಾತನಾಡಿ ಮಳೆಯಿಂದಾಗಿ ಮಾನವ ಹಾಗೂ ಜಾನುವಾರುಗಳ ಪ್ರಾಣ ಹಾನಿಯಾಗಿದ್ದರ ಪರಿಹಾರ ವಿತರಣೆಗೆ ಶೀಘ್ರವೇ ಕ್ರಮ ಜರುಗಿಸಬೇಕು. ಗ್ರಾಮಗಳಲ್ಲಿ ರುದ್ರಭೂಮಿ ಸ್ಥಳಕ್ಕಾಗಿ ಅಗತ್ಯದ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಹರ ಘರ ದಸ್ತಕ ಕೋವಿಡ್ ಲಸಿಕಾ ಅಭಿಯಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಗತ್ಯದ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಲೋಕೊಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರು ಮಾತನಾಡಿ ಜಿಲ್ಲೆಯಲ್ಲಿ ಅತೀವೃಷ್ಟಿಯಿಂದಾಗಿ ಹಾನಿಗೊಳಗಾದ ರಸ್ತೆ, ಸೇತುವ ಹಾಗೂ ತಡೆ ಗೋಡೆ ನಿರ್ಮಾಣಕ್ಕಾಗಿ 37.85 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಇದರಲ್ಲಿ 58.48 ಕಿ.ಮೀ ರಸ್ತೆ, 28 ಸೇತುವೆಗಳು ಹಾಗೂ 0.420 ಮೀ ತಡೆಗೋಡೆ ನಿರ್ಮಾಣಕ್ಕಾಗಿ ಟೆಂಡರ ಪ್ರಕ್ರಿಯೆ ಪ್ರಗತಿಯಲ್ಲಿದ್ದು ಶೀಘ್ರವೇ ಕಾಮಗಾರಿಗಳನ್ನು ಪ್ರಾರಂಭಿಸಲಾಗುವದು ಎಂದು ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ ಸಿ.ಇ.ಓ. ಭರತ ಎಸ್, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಪ್ರಭಾರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ ನುಚ್ಚಿನ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ, ಗದಗ ತಹಶೀಲ್ದಾರ ಕಿಶನ್ ಕಲಾಲ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಸೇರಿದಂತೆ ಎಲ್ಲ ತಹಶೀಲ್ದಾರರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ಕೃಷಿ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.