ಪರೀಕ್ಷಾರ್ಥಿಗಳಿಗೆ ಗುಲಾಬಿ ನೀಡಿದ ಜಿಲ್ಲಾಧಿಕಾರಿ

ಗದಗ,ಮಾ26: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಮಾರ್ಚ 25 ರಿಂದ ಜಿಲ್ಲಾದ್ಯಂತ ಆರಂಭವಾಗಿವೆ. ನಗರದ ಸಿಡಿಓ ಜೈನ್ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಪರೀಕ್ಷಾರ್ಥಿಗಳಿಗೆ ಗುಲಾಬಿ ಹೂ ನೀಡುವ ಮೂಲಕ ಶುಭ ಹಾರೈಸಿದರು.
ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳ ಜೀವನದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಎಂಬುದು ಮಹತ್ವದ ಪಾತ್ರ ವಹಿಸಲಿದೆ. ವಿದ್ಯಾರ್ಥಿಗಳು ಎದೆಗುಂದದೇ ಅಂಜದೇ ಯಾವುದೇ ಆತಂಕಕ್ಕೆ ಒಳಗಾಗದೇ ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಬರೆಯಬೇಕು. ಉತ್ತಮ ಅಂಕಗಳಿಸುವ ಮೂಲಕ ನಿಮ್ಮ ಜೀವನವನ್ನು ಕಟ್ಟಿಕೊಳ್ಳಲು ಮುಂದಾಗುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಪರೀಕ್ಷಾ ಕೇಂದ್ರದ ವ್ಯವಸ್ಥೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಅವರೊಂದಿಗೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿಗಳು ಯಾವುದೇ ಅಕ್ರಮಗಳಿಗೆ ಗೊಂದಲಗಳಿಗೆ ಅವಕಾಶ ನೀಡದಂತೆ ಸೂಚಿಸಿದರು. ಪರೀಕ್ಷೆಗಳು ಸುಲಲಿತವಾಗಿ ಜರುಗಲು ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ. ರಡ್ಡೇರ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ಎಸ್. ಬುರುಡಿ, ನಡುವಿನಮನಿ ಸೇರಿದಂತೆ ಶಾಲೆಯ ಮುಖ್ಯಸ್ಥರು, ವಿದ್ಯಾರ್ಥಿಗಳು ಇದ್ದರು.