ಪವಾರ್ ಹೇಳಿಕೆ ವಿರೋಧಿಸಿ ಕರವೇ ಪ್ರತಿಭಟನೆ

ಹುಬ್ಬಳ್ಳಿ ನ 18 : ರಾಜ್ಯದ ಗಡಿ ವಿಷಯದ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿರುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಡೆಯನ್ನು ಖಂಡಿಸಿ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟಿಸಲಾಯಿತು.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕರವೇ ಕಾರ್ಯಕರ್ತರು ಮಹಾರಾಷ್ಟ್ರದ ನಾಯಕರು ನಮ್ಮ ರಾಜ್ಯದ ಗಡಿ ವಿಷಯದ ಬಗ್ಗೆ ನೀಡುತ್ತಿರುವ ಹೇಳಿಕೆಗಳಿಗೆ ವಿರೋಧ ವ್ಯಕ್ತಪಡಿಸಿ ಮಹಾರಾಷ್ಟ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ರಾಜ್ಯದ ಬೆಳಗಾವಿ, ಕಾರವಾರ, ನಿಪ್ಪಾಣಿ ಜಿಲ್ಲೆಗಳು ಮಹಾರಾಷ್ಟ್ರಕ್ಕೆ ಸೇರಿದ್ದು ಎಂದು ಡಿಸಿಎಂ ಅಜಿತ್ ಪವಾರ್ ಹೇಳಿಕೆ ನೀಡುತ್ತಿದ್ದು, ಇದು ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿದೆ. ಹೀಗೆ ಇದು ಮುಂದುವರೆದರೆ ನಾವು ಸುಮ್ಮನಿರುವುದಿಲ್ಲ ಎಂದು ಪ್ರತಿಭಟನಾಕಾರರು ಅಜಿತ್ ಪವಾರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.