ಪಾಲಿಕೆ ಮತದಾರರ ಪಟ್ಟಿಯಲ್ಲಿ ಏಳು ಜನ ಪರಿಷತ್ ಸದಸ್ಯರ ಹೆಸರು ಸೇರ್ಪಡೆಗೆ ಮುಖ್ಯಮಂತ್ರಿ ಒತ್ತಡ ತಂದಿಲ್ಲ: ಜಿಲ್ಲಾಧಿಕಾರಿ ಜ್ಯೋತ್ಸ್ನಾ

ಕಲಬುರಗಿ,ನ.15:ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ರಾಜ್ಯ ವಿಧಾನ ಪರಿಷತ್‍ನ ಏಳು ಜನ ಸದಸ್ಯರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಮೇಲೆ ಒತ್ತಡ ತಂದಿದ್ದಾರೆ ಎಂಬ ಆರೋಪವನ್ನು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ನಿರಾಕರಿಸಿದರು.
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಮಾಧ್ಯಮ ವಕ್ತಾರ ಡಾ. ಶರಣಪ್ರಕಾಶ್ ಪಾಟೀಲ್ ಅವರು ಮಾಡಿರುವ ಆರೋಪವನ್ನು ತಳ್ಳಿ ಹಾಕಿದರು.
ನನಗೆ ಯಾರಿಂದಲೂ ಒತ್ತಡ ಬಂದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಮತದಾರರ ಪಟ್ಟಿಯಲ್ಲಿ ಏಳು ಜನ ಪರಿಷತ್ ಸದಸ್ಯರ ಸೇರ್ಪಡೆ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ನಾನು ಪತ್ರಿಕೆಗಳಿಂದಲೇ ನೋಡಿ ತಿಳಿದುಕೊಂಡಿದ್ದೇನೆ. ಸಂಬಂಧಿಸಿದ ಅಧಿಕಾರಿಗಳು ಆ ಕುರಿತು ಕ್ರಮ ಕೈಗೊಳ್ಳುತ್ತಾರೆ ಎಂದರು.
ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಆನ್‍ಲೈನ್ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಸುಮಾರು 1850 ಅರ್ಜಿಗಳು ಬಂದಿವೆ ಎಂದು ಹೇಳಿದ ಅವರು, ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುವ ಕುರಿತು ಪ್ರತಿಕ್ರಿಯಿಸಿ, ಸಂಬಂಧಿಸಿದ ಅಧಿಕಾರಿಗಳು ಸಕಾಲಕ್ಕೆ ಕ್ರಮ ಕೈಗೊಳ್ಳುತ್ತಾರೆ ಎಂದರು.
ಇನ್ನು ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಗಡಿಕೇಶ್ವಾರ್ ಗ್ರಾಮದಲ್ಲಿನ ಪುನರ್ವಸತಿ ಕುರಿತು ಮಾತನಾಡಿದ ಅವರು, ಈಗಾಗಲೇ ಅಲ್ಲಿ ಕಾಳಜಿ ಕೇಂದ್ರದಲ್ಲಿ ಊಟ ಕೊಡುವ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ. ಕಾಳಜಿ ಕೇಂದ್ರದಲ್ಲಿ ಉಳಿದುಕೊಳ್ಳುವವರಿಗೆ ಮಾತ್ರ ಊಟದ ವ್ಯವಸ್ಥೆ ಇತ್ತು. ಹೀಗಾಗಿ ಹೊರಗಿನವರು ಬಂದು ಊಟ ಮಾಡಿ ಹೋಗುತ್ತಿರುವುದರಿಂದ ಹಾಗೂ ಕಾಳಜಿ ಕೇಂದ್ರದಲ್ಲಿ ಯಾರೂ ಸಹ ಉಳಿದುಕೊಳ್ಳದೇ ಇರುವುದರಿಂದ ಊಟದ ವ್ಯವಸ್ಥೆ ಸ್ಥಗಿತಗೊಳಿಸಲಾಗಿದೆ ಎಂದರು.
ಈಗಾಗಲೇ ಸಾಮೂಹಿಕ ಶೆಡ್ ನಿರ್ಮಾಣ ಮಾಡಲಾಗಿದೆ. ಆದಾಗ್ಯೂ, ಗ್ರಾಮದಲ್ಲಿ ಪ್ರತಿ ಮನೆಗೆ ಪ್ರತ್ಯೇಕ ಶೆಡ್ ನಿರ್ಮಾಣದ ಬೇಡಿಕೆ ಇಟ್ಟಿದ್ದಾರೆ. ಅದನ್ನು ಇಡೇರಿಸುವುದು ಬಹು ಕಷ್ಟಕರವಾಗಲಿದೆ. ಆದಾಗ್ಯೂ, ಜಿಲ್ಲಾಡಳಿತವು ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದಿಂದ ಅನುಮೋದನೆ ದೊರಕಿದರೆ ಖಂಡಿತವಾಗಿಯೂ ಪ್ರತ್ಯೇಕ ಶೆಡ್ ಮನೆಗೊಂದು ನಿರ್ಮಿಸಲಾಗುತ್ತದೆ ಎಂದು ಅವರು ಹೇಳಿದರು.
ಸುತ್ತಮುತ್ತಲಿನ ಕಾರ್ಖಾನೆಗಳ ಸಹಾಯದೊಂದಿಗೆ ಪ್ರತ್ಯೇಕ ಶೆಡ್ ನಿರ್ಮಾಣ ಕೈಗೊಳ್ಳಬೇಕು ಎಂಬ ಮತ್ತೊಂದು ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಕೇವಲ ಗಡಿಕೇಶ್ವಾರ್ ಒಂದೇ ಅಲ್ಲ. ಒಟ್ಟು 20 ಗ್ರಾಮಗಳಲ್ಲಿ ಭೂಕಂಪದ ಭೀತಿ ಇದೆ. ಅವೆಲ್ಲ ಗ್ರಾಮಗಳಿಗೂ ವೈಯಕ್ತಿಕವಾಗಿ ಮನೆಗೊಂದು ಶೆಡ್ ನಿರ್ಮಾಣ ಮಾಡುವುದು ಕಷ್ಟ ಎಂದರು.
ಜಿಲ್ಲೆಯಲ್ಲಿನ ಅಕ್ರಮ ಮರಳು ಸಾಗಣೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ಭರವಸೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಲೀಷ್ ಶಶಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶ್ರೀಮತಿ ಇಶಾ ಪಂತ್, ನಗರ ಪೋಲಿಸ್ ಆಯುಕ್ತ ಡಾ. ವೈ.ಎಸ್. ರವಿಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕ್ರಣ್ಣ ವಣಿಕ್ಯಾಳ್ ಮುಂತಾದವರು ಉಪಸ್ಥಿತರಿದ್ದರು.