ರಾಯಚೂರು,ಜೂ.೧೬ – ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು ಜವಾಬ್ದಾರಿಯುತವಾಗಿ, ಇಚ್ಛಾಶಕ್ತಿಯಿಂದ ಹಾಗೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಉತ್ತಮ ಪ್ರಗತಿಯನ್ನು ಸಾಧಿಸಲು ಸಾಧ್ಯವಾಗುತ್ತದೆ ಆದ್ದರಿಂದ ಗ್ರಾಮ ಪಂಚಾಯತ್ ಪಿಡಿಓಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ನರೇಗಾ ಪಿಆರ್‌ಗಳ ಸಹಾಯಕ ನಿರ್ದೇಶಕರು ಮತ್ತು ಗ್ರಾಮ ಪಂಚಾಯತ್‌ಗಳ ಪಿಡಿಓಗಳೊಂದಿಗೆ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಜನರಿಗೆ ಮೂಲಭೂತ ಸೌಕರ್ಯಗಳಾದ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ನೀಡುವಲ್ಲಿ ಗ್ರಾಮ ಪಂಚಾಯತ್ ಪಿಡಿಓಗಳು ಉತ್ಸಾಹದಿಂದ ಹಾಗೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಗ್ರಾಮಗಳಿಂದ ಪಂಚಾಯತ್‌ಗಳಿಗೆ ಬರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ನಿಯಮಾನುಸಾರವಾಗಿ ಕಾರ್ಯನಿರ್ವಹಿಸಬೇಕು.ಪಂಚಾಯತಿಗಳಲ್ಲಿ ದಾಖಲಾತಿಗಳನ್ನು ಸರಿಯಾಗಿ ನಿರ್ವಹಣೆ ಮಾಡಿಕೊಳ್ಳಬೇಕು. ಮತ್ತು ಗ್ರಾಮಗಳಲ್ಲಿ ಆಗುವ ಎಲ್ಲಾ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರುವಂತೆ ಪಂಚಾಯತ್ ಪಿಡಿಓಗಳು ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಗ್ರಾಮ ಪಂಚಾಯತಿಗಳಿಂದಾಗಬೇಕಾದ ಕೆಲಸಗಳು ವಿಳಂಬವಾಗಬಾರದು, ಕಾಮಗಾರಿಗಳನ್ನು ಕ್ರಮಬದ್ಧವಾಗಿ ಅನುಷ್ಠಾನಗೊಳಿಸುವಲ್ಲಿ ಹೆಚ್ಚಿನ ಗಮನಹರಿಸಬೇಕು. ಗ್ರಾಮಗಳಲ್ಲಿ ಸ್ವಚ್ಛತೆ ಹಾಗೂ ಕುಡಿಯುವ ನೀರಿನ ವಿಷಗಳಿಗೆ ಹೆಚ್ಚಿನ ಆಧ್ಯತೆ ನೀಡಬೇಕು ಎಂದರು.
ಗ್ರಾಮಗಳಲ್ಲಿ ಯಾವುದೇ ಸಮಸ್ಯೆಗಳ ದೂರುಗಳು ಬಂದಲ್ಲಿ ಅವುಗಳನ್ನು ಸ್ವೀಕರಿಸಿ ಸ್ಥಳ ವೀಕ್ಷಣೆ ಮಾಡಿ ಸೂಕ್ತ ಪರಿಹಾರ ಒದಗಿಸುವಲ್ಲಿ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳು ಹೆಚ್ಚಿನ ಗಮನಹರಿಸಬೇಕು ಮತ್ತು ಕಡ್ಡಾಯವಾಗಿ ಗ್ರಾಮ ಪಂಚಾಯತ್ ಕಾರ್ಯಾಲಯದ ತಮ್ಮ ಸ್ಥಾನದಲ್ಲಿದ್ದು, ಸಮಸ್ಯೆಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಬೇಕು ಎಂದು ಸೂಚಿಸಿದರು.
ಗ್ರಾಮ ಪಂಚಾಯತ್ ಸಿಬ್ಬಂದಿಗಳು ಕಚೇರಿಗೆ ಬರುವ ಸಮಯ ಮತ್ತು ಪಿಡಿಓಗಳು ಕಚೇರಿಯಲ್ಲಿರುವ ಬಗ್ಗೆ ದಿನನಿತ್ಯವು ಬಯೋಮೆಟ್ರಿಕ್ ತಂತ್ರಜ್ಞಾನದ ಮೂಲಕ ತಾಲೂಕು ಪಂಚಾಯತ್ ಇಓಗಳು ಪರಿಶೀಲಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ, ಯೋಜನಾ ನಿರ್ದೇಶಕ ವಿ.ಪ್ರಕಾಶ, ಯೋಜನಾಧಿಕಾರಿ ಗುರುನಾಥ ಸೇರಿದಂತೆ ತಾಲೂಕು ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ನರೇಗಾ ಪಿಆರ್‌ಗಳ ಸಹಾಯಕ ನಿರ್ದೇಶಕರು ಮತ್ತು ಗ್ರಾಮ ಪಂಚಾಯತ್‌ಗಳ ಪಿಡಿಓಗಳು ಉಪಸ್ಥಿತರಿದ್ದರು.