
ಚಿತ್ರದುರ್ಗ.ಮಾ.೭; ಮಾರ್ಚ್ 9 ರಿಂದ 29ರ ವರೆಗೆ ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ದ್ವೀತಿಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ. ಜಿಲ್ಲೆಯಲ್ಲಿ ಈ ಬಾರಿ ಒಟ್ಟು 15660 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ಯಾವುದೇ ಲೋಪದೋಷಗಳ ಸಂಭವಿಸದಂತೆ, ಕಟ್ಟುನಿಟ್ಟಾಗಿ ಪರೀಕ್ಷಾ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆ ಹಾಗೂ 6ನೇ ತರಗತಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ಸಿದ್ಧತೆ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪದವಿ ಪೂರ್ವ ಶಿಕ್ಷಣ ಇಲಾಖೆ ರೂಪಿಸಿರುವ ಪರೀಕ್ಷಾ ಮಾರ್ಗದರ್ಶಿ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಪರೀಕ್ಷಾ ಕಾರ್ಯ ನಿರ್ವಹಿಸುವಲ್ಲಿ ಬೇಜವಾಬ್ದಾರಿ ಹಾಗೂ ನಿರ್ಲಕ್ಷತೆ ಬೇಡ. ಪರೀಕ್ಷೆಗಳು ಸುಸೂತ್ರವಾಗಿ ನಡೆಯಬೇಕು. ನಿಯಮಗಳು ಸರಿಯಾದ ರೀತಿಯಲ್ಲಿ ಪಾಲನೆ ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನು ನೇರವಾಗಿ ಹೊಣೆ ಮಾಡಲಾಗುವುದು ಎಂದು ಎಚ್ಚರಿಸಿದರು.ಪರೀಕ್ಷಾ ಕೇಂದ್ರ ಮುಖ್ಯ ಅಧೀಕ್ಷಕರು ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಮೂಲಭೂತ ಸೌರ್ಯಗಳ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಪೋನ್, ಸ್ಮಾರ್ಟ್ ಫೋನ್ ಹಾಗೂ ಎಲೆಕ್ಟ್ರಿಕಲ್ ವಸ್ತುಗಳನ್ನು ಕೊಂಡಯ್ಯಲು ಅವಕಾಶವಿಲ್ಲ. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಮೇಲ್ವಿಚಾರಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸಹ ಮೊಬೈಲ್ ಫೋನ್ ಬಳಸುವಂತಿಲ್ಲ. ಪರೀಕ್ಷಾ ಕೇಂದ್ರ ಮುಖ್ಯಸ್ಥರು ಮೊಬೈಲ್ ಪೋನ್ ಮಾತ್ರ ಪರೀಕ್ಷಾ ಕಾರ್ಯಗಳಿಗೆ ಸಂಬಂಧಿಸಿದಂತೆ ಬಳಸಬೇಕು. ಪರೀಕ್ಷಾ ಕೇಂದ್ರ ಒಳಗೆ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಿಸಲು ಅವಕಾಶವಿದೆ. ಪೋಷಕರಿಗೆ ಅವಕಾಶವಿಲ್ಲ. ಪರೀಕ್ಷಾ ಕೊಠಡಿಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸೂಕ್ತ ಆಸನದ ವ್ಯವಸ್ಥೆ ಕಲ್ಪಿಸಬೇಕು. ಪ್ರತಿ ಕೊಠಡಿಯಲ್ಲೂ ಗಡಿಯಾರ ಇರಬೇಕು ಎಂದರು.