ಪುಟ್ಟಣ್ಣ -ರಂಗನಾಥ ನಾಮಪತ್ರ ಸಲ್ಲಿಕೆ

ಶಿಕ್ಷಕ ಕ್ಷೇತ್ರದ ಉಪಸಮರ

ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ಎನ್‌ಡಿಎ ಅಭ್ಯರ್ಥಿಯಾಗಿ ಎ.ಪಿ. ರಂಗನಾಥ್‌ರವರು ಇಂದು ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಡಿಸಿಎಂ ಅಶ್ವತ್ಥ್‌ನಾರಾಯಣ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಇದ್ದಾರೆ.

ಬೆಂಗಳೂರು, ಜ. ೨೯- ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟಣ್ಣ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎ.ಪಿ. ರಂಗನಾಥ್ ಇಂದು ನಾಮಪತ್ರ ಸಲ್ಲಿಸಿದರು.
ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಫೆಬ್ರವರಿ ೧೬ ರಂದು ನಡೆಯಲಿದ್ದು, ಈ ಉಪಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ನ ಎ.ಪಿ. ರಂಗನಾಥ್ ಅವರು ಶಾಂತಿನಗರದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ, ಬಿಜೆಪಿಯ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ್‌ನಾರಾಯಣ, ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ, ವಿಧಾನಪರಿಷತ್ ಸದಸ್ಯ ಟಿ.ಎ. ಶರವಣ, ಮಾಜಿ ಎಂಎಲ್‌ಸಿ ಚೌಡರೆಡ್ಡಿ, ಜೆಡಿಎಸ್ ನಗರ ಘಟಕ ಅಧ್ಯಕ್ಷ ಹೆಚ್.ಎಂ. ರಮೇಶ್‌ಗೌಡ ಇದ್ದರು.
ಪುಟ್ಟಣ್ಣ ನಾಮಪತ್ರ
ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟಣ್ಣ ಸಹ ಇಂದು ತಮ್ಮ ನಾಮಪತ್ರ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಸಚಿವರುಗಳಾದ ಜಮೀರ್ ಅಹಮದ್ ಖಾನ್, ಡಾ.ಕೆ. ಸುಧಾಕರ್, ಕಾಂಗ್ರೆಸ್ ಮುಖಂಡ ರಾಮೋಜಿಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಫೆ. ೧೬ ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆಯ ದಿನ. ನಾಮಪತ್ರ ಪರಿಶೀಲನೆ ಜ. ೩೧ ರಂದು ನಡೆಯಲಿದೆ. ನಾಮಪತ್ರ ವಾಪಸ್ಸಾತಿಗೆ ಫೆ. ೨ ಕೊನೆಯ ದಿನಾಗಿದೆ ಈ ಚುನಾವಣೆಯ ಮತ ಎಣಿಕೆ ಫೆ. ೨೦ ರಂದು ನಡೆಯಲಿದೆ.