ಪುತ್ರನ 40 ಲಕ್ಷ ಲಂಚ ಕೋಟ್ಯಾಂತರ ಹಣ ಪತ್ತೆ ಶಾಸಕ‌ ಮಾಡಾಳ್ ಕೊನೆಗೂ ಸೆರೆ

ಬೆಂಗಳೂರು,ಮಾ.27- ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಇಂದು ಸಂಜೆ ಬಂಧಿಸಿದ್ದಾರೆ.
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿತ್ತು.
ಅರ್ಜಿ ವಜಾಗೊಂಡ ವೇಳೆ  ಚನ್ನಗಿರಿಯಲ್ಲಿ ಸರ್ಕಾರಿ ಕಾರ್ಯಕ್ರಮ‌ದಲ್ಲಿ ಭಾಗಿಯಾಗಿದ್ದ ಅವರು, ಕ್ಷಣಮಾತ್ರದಲ್ಲಿ ಅಲ್ಲಿಂದ ತೆರಳಿ ನಾಪತ್ತೆಯಾಗಿದ್ದರು. ಅವರನ್ನು ಬಂಧಿಸುವುದಕ್ಕಾಗಿ ಲೋಕಾಯುಕ್ತ ಪೊಲೀಸರ ತಂಡ ಅವರ ನಿವಾಸಕ್ಕೆ ತೆರಳಿತ್ತು. ಆದರೆ, ಅಷ್ಟರಲ್ಲೇ ಅವರು ಬೆಂಗಳೂರಿಗೆ ಕಾರಿನಲ್ಲಿ ತೆರಳಿದ್ದಾರೆ.
ಅಲ್ಲಿಂದ ಬೆನ್ನತ್ತಿ ಕೊನೆಗೂ ಅವರನ್ನು ಬಂಧಿಸುವಲ್ಲಿ ಲೋಕಾಯುಕ್ತ ಪೊಲೀಸರು ಯಶಸ್ವಿಯಾಗಿದ್ದಾರೆ. ಚನ್ನಗಿರಿಯಿಂದ ಇನ್ನೋವಾ ಕಾರಿನಲ್ಲಿ ಬೆಂಗಳೂರಿಗೆ ಬರುತ್ತಿದ್ದಾಗ ಕ್ಯಾತಸಂದ್ರ ಟೋಲ್ ಬಳಿ ಬಂಧಿಸಲಾಗಿದೆ.
ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು ಬೆಂಗಳೂರಿನ ಕಚೇರಿಗೆ ಕರೆತಂದು ವಿಚಾರಣೆ ಕೈಗೊಂಡಿದ್ದಾರೆ.
ಇದಕ್ಕೂ ‌ಮುನ್ನ ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿ ಆದೇಶ ನೀಡಿತ್ತು.
ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಇದರಿಂದ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದ ಪ್ರಕರಣದ ಮೊದಲ ಆರೋಪಿ ಶಾಸಕ ವಿರೂಪಾಕ್ಷಪ್ಪ ಬಂಧಿಸಲಾಗಿದೆ.
ಕೆಲ ದಿನಗಳ ಹಿಂದೆ ಮಾಡಾಳ್ ವಿರೂಪಾಕ್ಷಪ್ಪ ಅವರ ದಾವಣಗೆರೆ ನಿವಾಸದ ಮೇಲೂ ಲೋಕಾಯುಕ್ತ ದಾಳಿ ನಡೆದಿತ್ತು. ಅಲ್ಲಿಯೂ ಕೋಟ್ಯಂತರ ರೂ. ನಗದು ಪತ್ತೆಯಾಗಿತ್ತು. ಬಳಿಕ ನಾಪತ್ತೆಯಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ದೊರೆತ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಅವರಿಗೆ ತರಾತುರಿಯಲ್ಲಿ ಜಾಮೀನು ಮಂಜೂರು ಮಾಡಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಸಿಜೆಐಗೂ ಪತ್ರ ಬರೆಯಲಾಗಿತ್ತು.
ಈ ಮಧ್ಯೆ, ಲೋಕಾಯುಕ್ತ ಪ್ರಕರಣದ ಬಗ್ಗೆ ದಾವಣಗೆರೆಯಲ್ಲಿ ಕೇಳಲಾದ ಪ್ರಶ್ನೆಗೆ ಕೈ ಮುಗಿದು ಉತ್ತರಿಸಿದ ಮಾಡಾಳ್, ನನ್ನನ್ನು ಇಕ್ಕಟ್ಟಿಗೆ ಸಿಲುಕಿಸಬೇಡಿ ಎಂದರು. ಲೋಕಾಯುಕ್ತ ಪ್ರಕರಣದಲ್ಲಿ ಜಾಮೀನಿನಲ್ಲಿದ್ದರೂ ಅವರು, 351 ಕೋಟಿ ವೆಚ್ಚದ ವಿವಿಧ ಕಾಮಗಾರಿ ಹಾಗೂ ಶಂಕುಸ್ಥಾಪನಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ವಿವಿಧ ಕಾಮಗಾರಿಗಳ ಉದ್ಘಾಟನೆ ‌ಮಾಡಿದರು. ಇದೀಗ ವಿವಿಧ ಫಲಾನುಭವಿಗಳಿಗೆ ಪರಿಕರಗಳ ವಿತರಣೆ ಮಾಡಿ ಪರಾರಿಯಾಗುವಾಗ ಸಿಕ್ಕಿಬಿದ್ದಿದ್ದಾರೆ.