ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ


ತುಮಕೂರು, ಫೆ. ೨೫- ತುರ್ತು ಚಿಕಿತ್ಸಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯರು, ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಕರ್ತವ್ಯಕ್ಕೆ ಅಡ್ಡಿಪಡಿಸಿದ ಪೊಲೀಸ್ ಇನ್ಸ್‌ಪೆಕ್ಟರ್ ರಾಮಕೃಷ್ಣ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾ ನಿರತ ವೈದ್ಯರು ಒತ್ತಾಯಿಸಿದರು.
ಅಪಘಾತದಲ್ಲಿ ಗಾಯಗೊಂಡಿದ್ದ ಸುರೇಶ್ ಎಂಬುವರನ್ನು ಮಧ್ಯರಾತ್ರಿ ಆಸ್ಪತ್ರೆಗೆ ಕರೆ ತಂದಿದ್ದು, ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಕರ್ತವ್ಯದಲ್ಲಿದ್ದ ವೈದ್ಯರು, ಸಿಬ್ಬಂದಿ ಅಗತ್ಯ ಚಿಕಿತ್ಸೆ ನೀಡಿದ್ದಾರೆ. ವಿಳಂಬವಿಲ್ಲದೆ ಚಿಕಿತ್ಸೆ ನೀಡಿದ್ದರೂ ಮದ್ಯಪಾನ ಮಾಡಿ ಬಂದಿದ್ದ ಇನ್ಸ್‌ಪೆಕ್ಟರ್ ರಾಮಕೃಷ್ಣ ಅವರು ನಿಂದಿಸಿದ್ದಾರೆ. ಆಸ್ಪತ್ರೆಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ಗೊಂದಲದ ವಾತಾವರಣ ಸೃಷ್ಟಿಸಿ ಇತರೆ ರೋಗಿಗಳ ಚಿಕಿತ್ಸೆಗೂ ಅಡ್ಡಿಯುಂಟು ಮಾಡಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಅನುಚಿತ ವರ್ತನೆ ತೋರಿದ ಅಧಿಕಾರಿ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಆಸ್ಪತ್ರೆ ಸಿಬ್ಬಂದಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕಿ ಡಾ. ವೀಣಾ, ಡಾ. ಚೇತನ್, ಡಾ. ಚಂದನ್, ಡಾ. ದ್ವಾರಕ್ ಮತ್ತಿತರರು ಪಾಲ್ಗೊಂಡಿದ್ದರು.