ಪೊಲೀಸ್ ಠಾಣೆಗಳಲ್ಲಿ “ತೆರೆದ ಮನೆ” ಕಾರ್ಯಕ್ರಮ ನಿರಂತರವಾಗಿ ನಡೆಯಲಿ


ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಫೆ.5; ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ತೆರೆದ ಮನೆ ಕಾರ್ಯಕ್ರಮ ನಿರಂತರವಾಗಿ ನಡೆಯಬೇಕು. ಮಕ್ಕಳನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಪೊಲೀಸ್ ಠಾಣೆ ಮತ್ತು ಪೊಲೀಸ್ ವ್ಯವಸ್ಥೆಯ ಬಗ್ಗೆ ಸಂಪೂರ್ಣ ಪರಿಚಯ ಮಾಡಿಕೊಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ. ತಿಪ್ಪೇಸ್ವಾಮಿ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೋಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆಯ ಎಸ್.ಜೆ.ಪಿ.ಯು ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಗಳು ಹಾಗೂ ಅಧಿಕಾರಿಗಳ ಪಾತ್ರ ಮತ್ತು ಕರ್ತವ್ಯಗಳ ಕುರಿತು ಒಂದು ದಿನದ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.ತೆರೆದ ಮನೆ ಕಾರ್ಯಕ್ರಮ ಪೊಲೀಸ್ ಠಾಣೆ ಹಾಗೂ ಶಾಲೆಗಳಲ್ಲಿ ನಿರಂತರವಾಗಿ ಎಸ್‍ಜೆಪಿ ಘಟಕದ ಅಧಿಕಾರಿಗಳು ನಡೆಸುವುದರಿಂದ ಪೊಲೀಸ್ ಇಲಾಖೆ ಹಾಗೂ ಅಧಿಕಾರಿಗಳ ಬಗ್ಗೆ ವಿಶ್ವಾಸ, ಪ್ರೀತಿ ಸಂಬಂಧ ಸೇತುವೆಯಾಗಿ ತೆರೆದ ಮನೆ ಕಾರ್ಯಕ್ರಮ ಪೊಲೀಸ್ ಮತ್ತು ಮಕ್ಕಳ ನಡುವೆ ಉತ್ತಮ ಭಾಂದವ್ಯ ವೃದ್ಧಿಯಾಗಲಿದೆ. ಜತೆಗೆ ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳೂ ಕಡಿಮೆಯಾಗಲಿದೆ ಎಂದರು.’ತೆರೆದ ಮನೆ ಕಾರ್ಯಕ್ರಮ ಆಯೋಜಿಸುವ ಮೂಲಕ ಮಕ್ಕಳ ಸಹಾಯವಾಣಿ, ಪೊಕ್ಸೋ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಹಾಗೂ ಪೊಲೀಸ್ ವ್ಯವಸ್ಥೆ ಬಗ್ಗೆ ಪರಿಚಯ ಸೇರಿದಂತೆ ಮತ್ತಿತರರ ವಿಷಯಗಳ ಬಗ್ಗೆ ಮಕ್ಕಳಿಗೆ ತಿಳಿಸಬೇಕು ಎಂದು ಹೇಳಿದರು.