ಪೊಲೀಸ್ ಮೇಲೆ ಹಲ್ಲೆ- ಕಠಿಣ ಕಾನೂನು ಕ್ರಮ; ಎಸ್ಪಿ ಸೋನಾವಣೆ

ಪುತ್ತೂರು, ಜೂ.೪- ದಕ ಜಿಲ್ಲೆಯಲ್ಲಿ ಕಳೆದ ಕೆಲ ಸಮಯದಿಂದ ಪೊಲೀಸರ ಮೇಲಿನ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪುತ್ತೂರಿನ ಕೆಮ್ಮಾಯಿ ಎಂಬಲ್ಲಿಯೂ ಬುಧವಾರ ಪೊಲೀಸರ ಮೇಲೆ ಹಲ್ಲೆ ನಡೆದಿದೆ. ಈ ಸಂಬಂಧ ಮೂರು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರ ಮೇಲೆ ಹಲ್ಲೆ ನಡೆಸುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ನೀಡಿದ್ದಾರೆ.
ಅವರು ಮಾಧ್ಯಮದೊಂದಿಗೆ ಮಾತನಾಡಿ, ಕ್ಷುಲ್ಲಕ ಕಾರಣ ಮತ್ತು ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿರುವವರನ್ನು ವಿಚಾರಣೆ ನಡೆಸುವ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪುತ್ತೂರಿನ ಕೆಮ್ಮಾಯಿ ಎಂಬಲ್ಲಿ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿದ ತಂಡವನ್ನು ತಡೆದ ಪೊಲೀಸರ ಮೇಲೆ ಹಲ್ಲೆ ನಡೆಸಿದೆ. ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ನೆ ಎಂಬಲ್ಲಿಯೂ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಲಾಗಿತ್ತು. ಈ ತಂಡ ಉಪ್ಪಿನಂಗಡಿ ನೆಕ್ಕಿಲಾಡಿ ಮೂಲಕ ಪುತ್ತೂರಿಗೆ ಬರುತ್ತಿರುವಾಗ ತಪಾಸಣೆ ನಿರತರಾಗಿದ್ದ ಎಸೈ ಜಂಬೂರಾಜ್ ಮಹಾಜನ್ ಆರೋಪಿಗಳಿದ್ದ ಕಾರನ್ನು ನಿಲ್ಲಿಸಲು ಸೂಚನೆ ನೀಡಿದ್ದರು. ಈ ಸಂದರ್ಭದಲ್ಲಿ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಕಾರಿನಲ್ಲಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಓರ್ವ ಆರೋಪಿ ಪರಾರಿಯಾಗಿದ್ದಾನೆ ಎಂದು ಅವರು ಮಾಹಿತಿ ನೀಡಿದರು.
ಬಂಧಿತ ಆರೋಪಿಗಳನ್ನು ಮಂಗಳೂರಿನ ಉಳ್ಳಾಲ ನಿವಾಸಿಗಳಾದ ಮಹಮ್ಮದ್ ಅರಾಫತ್ (೩೫) ಯು.ಕೆ.ನಾಸೀರ್ (೩೮) ಹಾಗೂ ಮಹಮ್ಮದ್ ಆಸೀಪ್ ( ೪೮) ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ಅರ್ಫೈನ್ ಪರಾರಿಯಾಗಿದ್ದಾನೆ. ಪೊಲೀಸರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಮತ್ತು ಪರಾರಿಯಾಗಿರುವ ಆರೋಪಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಉಪಯೋಗಿಸುತ್ತಿದ್ದ ಕಾರನ್ನೂ ಪೋಲೀಸರು ವಶಕ್ಕೆ ಪಡೆದಿದ್ದು, ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.