ಪೌರ ಕಾರ್ಮಿಕರಿಗೆ ವಿವಿಧ ಇಲಾಖೆಗಳಲ್ಲಿ ಇರುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ: ನಾರಾಯಣಸ್ವಾಮಿ

ಮೈಸೂರು: ಮಾ.15:- ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೌರ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾದ ಎ ನಾರಾಯಣ ಸ್ವಾಮಿ ಅವರು ತಿಳಿಸಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಮತ್ತು ಅಭಿವೃದ್ಧಿ ನಿಗಮದ ವತಿಯಿಂದ ಮಾನ್ಯುಯಲ್ ಸ್ಕ್ಯಾವೆಂಜರ್‍ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ನಿಯಮ 2013 ರ ಪರಿಣಾಮಕಾರಿ ಅನುಷ್ಠಾನ ಕುರಿತು ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ಸಫಾಯಿ ಕರ್ಮಚಾರಿಗಳ ಆಯೋಗ ರಾಜ್ಯದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಆಯೋಗದ ಅಧ್ಯಕ್ಷರು ಪೌರ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಮಾನವೀಯತೆ ಎಂಬುದು ಬಹಳ ಮುಖ್ಯ. ಪೌರ ಕಾರ್ಮಿಕರ ಕೆಲಸಗಳ ಬಗ್ಗೆ ಗೌರವ ಇರಬೇಕು ಎಂದರು.
ಮ್ಯಾನುಯಲ್ ಸ್ಕ್ಯಾವೆಂಜರ್ ಪದ್ಧತಿ ನಿಷೇದ ಆಗಿದ್ದರೂ ಅದು ಇನ್ನೂ ಕೆಲವೆಡೆ ಇದೆ. ಇದರ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಆಗಬೇಕಿದೆ. ನೇರಪಾವತಿ ಪೌರ ಕಾರ್ಮಿಕರನ್ನು ರಾಜ್ಯ ಸರ್ಕಾರ ಖಾಯಂ ಮಾಡುತ್ತಿರುವುದು ಸ್ವಾಗತಾರ್ಹ. ದೇಶದಲ್ಲಿ 50 ಲಕ್ಷ ಪೌರ ಕಾರ್ಮಿಕರು ಇದ್ದಾರೆ. ಇವರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ನೀಡಲು ಸಾಧ್ಯವಾಗಿಲ್ಲ ಎಂದರು.
ಹಣ ಕೊಟ್ಟರೆ ಮತ ನೀಡುತ್ತಾರೆ ಎಂಬ ಭಾವನೆ ಇರುವವರೆಗೆ ಪ್ರಜಾ ಪ್ರಭುತ್ವಕ್ಕೆ ಶೋಭೆ ತರುವುದಿಲ್ಲ. ಪೌರ ಕಾರ್ಮಿಕರ ಸಾಮಾಜಿಕ ಶೈಕ್ಷಣಿಕ, ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಪೌರ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಅರ್ಜಿಗಳನ್ನು ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ವೆಂಕಟೇಶನ್ ಅವರು ಮಾತನಾಡಿ ನನ್ನ ತಂದೆ ತಾಯಿಗಳು ಸಹ ಸಫಾಯಿ ಕರ್ಮಚಾರಿಗಳು. ಮಾನ್ಯ ಪ್ರಧಾನ ಮಂತ್ರಿಗಳು ನನ್ನ ಮೇಲೆ ನಂಬಿಕೆ ಇಟ್ಟು ಈ ಜವಾಬ್ದಾರಿ ನೀಡಿದ್ದಾರೆ. ಸಫಾಯಿ ಕರ್ಮಚಾರಿಗಳ ಸಮಸ್ಯೆಗಳನ್ನು ನಿವಾರಿಸುವಂತೆ ತಿಳಿಸಿದರು. ನಮ್ಮ ಸೇವೆಯ ಮಹತ್ವ ಕರೋನಾ ಸಂದರ್ಭದಲ್ಲಿ ತಿಳಿದಿದೆ. ಆದ್ದರಿಂದ ಮಾನ್ಯ ಪ್ರಧಾನ ಮಂತ್ರಿಗಳು ಪೌರ ಕಾರ್ಮಿಕರ ಪಾದಗಳನ್ನು ತೊಳೆದರು. ಮ್ಯಾನುಯಲ್ ಸ್ಕ್ಯಾವೆಂಜರ್‍ಗಳ ಮೃತಪಟ್ಟರೆ 10 ಲಕ್ಷ ಪರಿಹಾರ ನೀಡಲಾಗುತ್ತಿದೆ ಇದನ್ನು 25 ಲಕ್ಷಕ್ಕೆ ಹೆಚ್ಚಿಸಬೇಕು. ಮ್ಯಾನುಯಲ್ ಸ್ಕ್ಯಾವೆಂಜರ್‍ಗಳ ಮೃತಪಟ್ಟರೆ ಅದಕ್ಕೆ ಕಾರಣವಾದ ಗುತ್ತಿಗೆದಾರರನ್ನು ಬಂಧಿಸಲಾಗುತ್ತಿದೆ. ಅದಕ್ಕೆ ಸಂಬಔಧಿಸಿದ ಅಧಿಕಾರಿಗಳನ್ನು ಬಂಧಿಸಬೇಕು ಹಾಗೂ ಹೀಗಿರುವ ಶಿಕ್ಷೆಯನ್ನು ಹೆಚ್ಚಿಸಬೇಕು ಎಂದರು.
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಎಂ ಕೋಟೆ ಶಿವಣ್ಣ ಅವರು ಮಾತನಾಡಿ ಕರ್ನಾಟಕ ಸಫಾಯಿ ಕರ್ಮಚಾರಿಗಳ ಆಯೋಗದ 2 ವರ್ಷಗಳ ಕಾರ್ಯಗಳ ಸಾಧನೆಯ ಪುಸ್ತಕ ಬಿಡುಗಡೆ ಮಾಡಲಾಗುತ್ತಿದೆ. 2013 ಮ್ಯನುಯಲ್ ಸ್ಕಾವೆಂಜರ್ ನಿಷೇಧ ಕಾಯಿದೆಯನ್ನು ಜಾರಿಗೆ ತರಲಾಯಿತು. ಕರ್ನಾಟಕ ರಾಜ್ಯದಲ್ಲಿ 11133 ಪೌರ ಕಾರ್ಮಿಕರನ್ನು ಖಾಯಂ ಮಾಡಲಾಗುತ್ತಿದೆ. ಎರಡನೇ ಹಂತದಲ್ಲಿ 12500 ಪೌರ ಕಾರ್ಮಿಕರನ್ನು ಖಾಯಂ ಮಾಡಲಾಗುತ್ತಿದೆ. ಅಲ್ಲದೆ ಮಾನ್ಯ ಮುಖ್ಯಮಂತ್ರಿ ಗಳು ನೇರ ಪಾವತಿ ಯಡಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಕಾರ್ಮಿಕರನ್ನು ಖಾಯಂ ಮಾಡಲು ತೀರ್ಮಾನಿಸಿದ್ದಾರೆ ಎಂದು ತಿಳಿಸಿದರು.
ಎಲ್ಲಾ ಕಡೆ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಸರ್ವೆ ಕಾರ್ಯ ನಡೆಯುತ್ತಿದೆ. ಪೌರ ಕಾರ್ಮಿಕರಿಗೆ ಸ್ವಚ್ಛತಾ ಪರಿಕರಗಳನ್ನು ನೀಡಲಾಗುತ್ತಿದೆ ಹಾಗೂ ವಿಶ್ರಾಂತಿ ಗೃಹಗಳನ್ನು ನಿರ್ಮಿಸಲಾಗುವುದು. ಪೌರ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಆಯೋಗದಿಂದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ನೇರ ಪಾವತಿಯಡಿ ಕಾರ್ಯ ನಿರ್ವಹಿಸುತ್ತಿದ್ದು ಮರಣ ಹೊಂದಿರುವ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡಲು ಹಾಗೂ 10 ಲಕ್ಷ ಪರಿಹಾರ ನೀಡಲು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ.
ಮಾನ್ಯುಯಲ್ ಸ್ಕಾವೆಂಜರ್ ಗಳಿಗೆ ಪುನರ್ವಸತಿ ಕಲ್ಪಿಸಲು ಕಾರ್ಯ ನಿರ್ವಹಿಸಲಾಗುತ್ತಿದೆ ಎಂದರು.
ಕರ್ನಾಟಕ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ವೆಂಕಟೇಶ್ ಅವರು ಮಾತನಾಡಿ ರಾಜ್ಯ ಸರ್ಕಾರ ಪೌರ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ನೇರ ಪಾವತಿ ಪೌರ ಕಾರ್ಮಿಕರನ್ನು ಖಾಯಂ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿಯನ್ನು ಹೆಚ್ಚಿಸಿದೆ ಎಂದರು.
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಹಾಗೂ ಅಭಿವೃದ್ಧಿ ನಿಗಮದ ಕಾರ್ಯ ಸಾದನೆ ಕುರಿತ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಮಾಜಿ ಸದಸ್ಯರಾದ ಜಗದೀಶ್ ಹಿರೇಮನಿ, ಮಾಜಿ ಅಧ್ಯಕ್ಷರಾದ ನಾರಾಯಣ್, ಎನ್ ಎಂ ಶ್ರೀರಾಮುಲು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.