ಪ್ರಗತಿ ಪರಿಶೀಲನೆ ಸಭೆ: ಕಾಮಗಾರಿ ವಿಳಂಬ ತರಾಟೆ

ರಾಯಚೂರು, ಜ.೦೫- ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆ ಯೋಜನೆಗಳ ಸಮಗ್ರ ಅನುಷ್ಠಾನ ವಿಳಂಬ ದೋರಣೆ ಖಂಡಿಸಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಧಿಕಾರಿ ಶಶಿಧರ್ ಕುರೇರು ತೀವ್ರ ಆಕ್ರೋಶಗೊಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅವರಿಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅಂಬೇಡ್ಕರ್ ಅಭಿವೃದ್ಧಿ ನಿಗಮ ವೈಯುಕ್ತಿಕ ಯೋಜನೆ ಸಮಗ್ರ ಅನುಷ್ಠಾನ ವಿಳಂಬ ಖಂಡಿಸಿ ಅಂಬೇಡ್ಕರ್ ನಿಗಮ ಅಧಿಕಾರಿ ರವಿ ಅವರನ್ನು ತರಾಟೆಗೆ ತೆಗೆದುಕೊಂಡರು.
ವೈಯಕ್ತಿಕ ಯೋಜನೆ ಕುರಿತು ಕ್ರಿಯಾಯೋಜನೆ ಸಿದ್ದಪಡಿಸಿ ಮುಂದಿನ ಕೆಡಿಪಿ ಸಭೆಯಲ್ಲಿ ವರದಿ ಸಲ್ಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಕೃಷಿ ಇಲಾಖೆ, ಅರಣ್ಯ ಇಲಾಖೆ, ರೇಷ್ಮೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಯಲ್ಲಿ ಬಾಕಿ ಉಳಿದ ಕಾಮಗಾರಿಗಳ ಕುರಿತು ಪ್ರಗತಿ ಪರಿಶೀಲನೆ ವೇಳೆ ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು.
ಅನುಷ್ಠಾನಗೊಂಡಿರುವ ಕಾಮಗಾರಿಗಳಿಗಿಂತ, ಬಾಕಿ ಇರುವ ಕಾಮಗಾರಿಗಳ ಸಂಖ್ಯೆಯೇ ಜಾಸ್ತಿ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಕಾಮಗಾರಿ ಅನುಷ್ಠಾನದಲ್ಲಿ ಲೋಪ ಕಂಡುಬಂದರೆ ಸಂಬಂಧಿಸಿದವರನ್ನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಜಿಲ್ಲೆಯ ವಿವಿಧ ಇಲಾಖೆಯಲ್ಲಿ ಬಾಕಿ ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದ ಅವರು, ಜಿಲ್ಲೆಯಲ್ಲಿ ಬಾಕಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಿ ಜನವರಿ ತಿಂಗಳು ಒಳಗಡೆ ಫಲಾನುಭವಿಗಳನ್ನು ಆಯ್ಕೆ ಮಾಡುವಂತೆ ಸೂಚನೆ ನೀಡಿದರು. ೨೦೨೦-೨೨ ಸಾಲಿನಲ್ಲಿ ನೆನಗುದ್ದಿಗೆ ಬಿದ್ದಿರುವ ೮೩ ಅಂಗನವಾಡಿ ಕೇಂದ್ರ ಕಾಮಗಾರಿಗಳನ್ನು ಜನವರಿ ಒಳಗಡೆ ಪೂರ್ಣಗೊಳಿಸಲು ಗಡವು ನೀಡಿದರು.
ವಿವಿಧ ಯೋಜನೆಗಳನ್ನು ಜನರು ಸದುಪಯೋಗ ಪಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ತರಬೇಕು. ಅರ್ಜಿಗಳನ್ನು ಕಡೆಗಣಿಸದೇ ಎಲ್ಲ ಫಲಾನುಭವಿಗಳನ್ನು ಆಯ್ಕೆ ಮಾಡುವಂತೆ ಸೂಚನೆ ನೀಡಿದರು. ಆರ್ಥಿಕ ಪ್ರಗತಿ ಸಾಧಿಸಬೇಕು. ಜಿಲ್ಲೆಯಲ್ಲಿ ನೆನಗುದ್ದಿಗೆ ಬಿದ್ದಿರುವ ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಗುಣಮಟ್ಟದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಿದರು. ಕಾಮಗಾರಿ ವಿಳಂಬ ಮಾಡದೇ ಅನುಷ್ಠಾನಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಯೋಜನಾಧಿಕಾರಿ ರೋಣಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಉಪಸ್ಥಿತರಿದ್ದರು.