ಪ್ರಗತಿ ಪರಿಶೀಲನೆ ಸಭೆ

ಗದಗ, ನ 26: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಹಂಚಿಕೆ ಯೋಜನೆಯಡಿ ಬಿಡುಗಡೆಯಾದ ಅನುದಾನದಲ್ಲಿ ಅರ್ಹ ಫಲಾನುಭವಿಗಳ ಆಯ್ಕೆ ಮಾಡಿ ವಿಳಂಬ ಮಾಡದೇ ನಿಗದಿತ ಸಮಯದಲ್ಲಿಯೇ ಗುಣಮಟ್ಟದಿಂದ ಕೂಡಿದ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ತನ್ಮೂಲಕ ಸದರಿ ಯೋಜನೆಯಡಿ ಆರ್ಥಿಕ ಹಾಗೂ ಭೌತಿಕ ಪ್ರಗತಿ ಪೂರ್ಣ ಪ್ರಮಾಣದಲ್ಲಿ ಸಾಧಿಸುವತ್ತ ಇಲಾಖೆಯ ಅಧಿಕಾರಿಗಳು ಕಾರ್ಯತತ್ಪರರಾಗಬೇಕೆಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಡಳಿತ ಭವನದಲ್ಲಿ ಜರುಗಿದ ಪ.ಜಾ/ಪ.ಪಂ ಉಪ ಹಂಚಿಕೆ ಯೋಜನೆಯಡಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಸ್.sಸಿಎಸ್ ಎ ಮತ್ತು ಟಿ.ಎಸ್.ಎ ಉಪ ಹಂಚಿಕೆ ಯೋಜನೆಯಡಿ ಪ್ರಗತಿ ಪರಿಶೀಲನೆ ಸಭೆಗೆ ಸಂಬಂಧಿತ ಎಲ್ಲ ಇಲಾಖೆಯ ಅಧಿಕಾರಿಗಳು ತಪ್ಪದೇ ಹಾಜರಾಗಬೇಕು. ಇಲ್ಲದಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಯೋಜನೆಯಡಿ ಬಿಡುಗಡೆಯಾದ ಅನುದಾನ ದುರುಪಯೋಗವಾಗದಂತೆ ನಿಗಾವಹಿಸಬೇಕು. ಪ್ರಸಕ್ತ ಆರ್ಥಿಕ ವರ್ಷ ಮಾರ್ಚ 31 ರೊಳಗಡೆ ಅನುಷ್ಟಾನಿತ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಒಂದು ವೇಳೆ ಕಾಮಗಾರಿಗಳನ್ನು ಪ್ರಾರಂಭಿಸದೇ ಇದ್ದಲ್ಲಿ ಶೀಘ್ರವೇ ಟೆಂಡರ್ ಪ್ರಕ್ರಿಯೆ ಕೈಗೊಂಡು ಕಾಮಗಾರಿಗಳನ್ನು ಪ್ರಾರಂಭಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಅವರು ಮಾತನಾಡಿ ಎಸ್.ಸಿಎಸ್‍ಎ ಮತ್ತು ಟಿ.ಎಸ್.ಎ ಉಪ ಹಂಚಿಕೆ ಯೋಜನೆಯಡಿ ಬಿಡುಗಡೆಯಾದ ಅನುದಾನದ ಸದ್ಭಳಕೆಯಾಗಬೇಕು. ಯಾವುದೇ ಕಾರಣಕ್ಕೂ ಅನುದಾನ ಲ್ಯಾಪ್ಸ್ ಆಗದಂತೆ ನೋಡಿಕೊಳ್ಳಬೇಕೆಂದರು.
ಸಕಾಲದಲ್ಲಿಯೇ ಅರ್ಜಿಗಳ ಶೀಘ್ರ ವಿಲೇವಾರಿಯಾಗಲಿ : ಇದೇ ಸಂದರ್ಭದಲ್ಲಿ ಸಕಾಲ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಜಿಲ್ಲಾಧಿಕಾರಿಗಳು ಸಕಾಲ ಯೋಜನೆಯ ಅನುಷ್ಟಾನದಲ್ಲಿ ಜಿಲ್ಲೆ ಉತ್ತಮ ಪ್ರಗತಿ ಸಾಧಿಸಲು ಎಲ್ಲ ಅಧಿಕಾರಿಗಳು ನಿಗದಿತ ಅವಧಿಯಲ್ಲಿ ಸ್ವೀಕರಿಸಿದ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿರುವುದರಿಂದ ಕೋರ್ಟಗಳು, ಶಾಲೆ, ಕಾಲೇಜುಗಳು, ಅಂಗನವಾಡಿ ಕೇಂದ್ರಗಳನ್ನು ಪುನರಾರಂಭಿಸಲಾಗಿದ್ದು ಯಾವುದೇ ನೆಪ ಹೇಳದೇ ಸಕಾಲ ಯೋಜನೆಯಡಿ ಬಂದ ಅರ್ಜಿಗಳನ್ನು ಸ್ವೀಕರಿಸಿ ಶೀಘ್ರ ವಿಲೇವಾರಿಗೆ ಕ್ರಮ ವಹಿಸಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಸತೀಶಕುಮಾರ್ ಎಂ ಮಾತನಾಡಿ ಸಕಾಲದಲ್ಲಿ ಸ್ವೀಕರಿಸಿದ ಅರ್ಜಿಗಳನ್ನು ನಿಗದಿಪಡಿಸಿದ ವೇಳೆಯಲ್ಲಿ ವಿಲೇವಾರಿ ಮಾಡದಿದ್ದಲ್ಲಿ ಇಲಾಖೆಯ ಅಧಿಕಾರಿಗಳೇ ಹೊಣೆಗಾರರಾತ್ತಾರೆ ಹಾಗೂ ಶಿಸ್ತು ಕ್ರಮಕ್ಕೆ ಒಳಗಾಗಬೇಕಾಗುತ್ತದೆ. ಕಾರಣ ಅದಕ್ಕೆ ಅವಕಾಶ ನೀಡದೇ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯನಿರ್ವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ಅಕ್ಷರ ದಾಸೋಹ ಅಧಿಕಾರಿ ಮಂಗಳಾ ತಾಪಸ್ಕರ್ , ಆಯುಷ್ ಇಲಾಖೆ ಅಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು ಹಾಜರಿದ್ದರು.